ಮಂಗಳೂರು.ಮೇ.15: ತೌಖ್ತೆ ಚಂಡಮಾರುತ ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ತೀವ್ರ ಪರಿಣಾಮ ಬೀರುತ್ತಿದ್ದು, ಶನಿವಾರದಿಂದಲೇ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಾರಂಭಿಸಿದೆ. ಮುಂಜಾನೆಯಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಹಾನಿಯಾಗಿದೆ. ಕಡಲ ಕಿನಾರೆಯುದ್ದಕ್ಕೂ ಭೀಮ ಶಕ್ತಿಯ ಭಾರೀ ಗಾತ್ರದ ಅಲೆಗಳು ದಡವನ್ನು ನುಂಗಿಹಾಕಿವೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ಸರಬರಾಜು ಕಡಿತವಾಗಿದೆ.
ಉಡುಪಿ, ಬ್ರಹ್ಮಾವರ, ಕಾರ್ಕಳ, ಕಾಪು ಭಾಗದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗಿದೆ. ಮಲ್ಪೆ, ಮಂಗಳೂರಿನಲ್ಲಿ ಕಡಲ್ಕೊರೆತ ತೀವ್ರ ಗೊಂಡಿದ್ದು, ಸೋಮೇಶ್ವರದಲ್ಲಿ ಹಿಂದೂ ರುದ್ರಭೂಮಿ ಸಮುದ್ರಪಾಲಾಗಿದೆ. ಹಲವು ಮನೆಗಳು ಅಪಾಯದಲ್ಲಿದ್ದು, ಮರವಂತೆಯಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಕೆಲವೇ ತಿಂಗಳ ಹಿಂದೆ ನಿರ್ಮಿಸಿದ್ದ ಮೀನುಗಾರಿಕೆ ರಸ್ತೆ ಕೊಚ್ಚಿ ಹೋಗಿದೆ.
ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಎರಡು ಅಂತಸ್ತಿನ ಮನೆ ಕೊಚ್ಚಿಹೋಗಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇನ್ನೂ ಮೂರು ದಿನ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಮೇ 18ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ದ.ಕ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ 3 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ನಡುವೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವೂ ಚಂಡಮಾರುತದ ಜೊತೆ ಸೇರಲಿದೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉತ್ತಮ ಮಳೆ ನಿರೀಕ್ಷಿಸಲಾಗಿದ್ದು, ಕರಾವಳಿ, ಮಲೆನಾಡಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.