ಬೆಂಗಳೂರು, ಜೂನ್ 05: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ನಿರೀಕ್ಷಿತ ಮಟ್ಟದಲ್ಲಿ ಇಳಿಕೆ ಕಂಡುಬರದ ಕಾರಣ ಜೂನ್ 3ರಂದು ಮತ್ತೆ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿತ್ತು.
ಇದೀಗ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದ್ದು, ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಾಕ್‌ಡೌನ್ ಸಡಿಲಿಕೆ ಕುರಿತು ಸುಳಿವು ಕೊಟ್ಟಿದ್ದಾರೆ. ಸೋಮವಾರದಿಂದ ಲಾಕ್‌ಡೌನ್ ಸಡಿಲಿಕೆ ಮಾಡುವ ಕುರಿತು ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಇನ್ನು ಮೂರ್ನಾಲ್ಕು ದಿನ ರಾಜ್ಯದ ಪರಿಸ್ಥಿತಿಯನ್ನು ವಿಶ್ಲೇಷಿಸುತ್ತೇವೆ.
ಯಾವ್ಯಾವ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೇಗಿದೆ ಎಂಬುದನ್ನು ಗಮನಿಸುತ್ತೇವೆ. ನಂತರ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.
ಲಾಕ್‌ಡೌನ್ ಪ್ಯಾಕೇಜ್ ಕುರಿತು ಮಾತನಾಡಿರುವ ಅವರು, “ಲಾಕ್‌ಡೌನ್ ಕಾರಣವಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದೆವು. ಇಂದು ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಹಣ ಬಿಡುಗಡೆ ಮಾಡಿದ್ದೇವೆ. ಒಟ್ಟು 25 ಲಕ್ಷ ಕಾರ್ಮಿಕರಿಗೆ ಹಣ ಬಿಡುಗಡೆಯಾಗಿದೆ. 4 ಲಕ್ಷ ಜನರಿಗೆ ಇಂದು 10 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ಅಸಂಘಟಿತ ಕಾರ್ಮಿಕರಿಗೆ ಅರ್ಜಿ ಸಲ್ಲಿಸಲು ಆಪ್ ಬಿಡುಗಡೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.