ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಬಸ್ ಮತ್ತು ಆಟೋ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ.
ಕಾನ್ಪುರದ ಉಪನಗರ ಸಚೆಂದಿಯಲ್ಲಿ ಬಸ್ ಮತ್ತು ಆಟೊ ಢಿಕ್ಕಿ ಹೊಡೆದ ಪರಿಣಾಮ 17 ಮಂದಿ ಮೃತಪಟ್ಟಿದ್ದು, 30 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಲಾಲಾ ಲಜಪತ್ರಾಯ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಪೊಲೀಸರು ಹೇಳಿದ್ದಾರೆ.
ಲಖನೌ ನಿಂದ ದೆಹಲಿಗೆ ಬಸ್ ಪ್ರಯಾಣಿಸುತ್ತಿತ್ತು. ಈ ವೇಳೆ ಸಚೆಂದಿಯಲ್ಲಿ ಬಸ್ ಆಟೋಗೆ ಢಿಕ್ಕಿ ಹೊಡೆದಿದೆ.
ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಸಂತಾಪ ಸೂಚಿಸಿದ್ದಾರೆ ಮತ್ತು ಪರಿಹಾರ ಘೋಷಣೆ ಮಾಡಿದ್ದು, ಅಪಘಾತದಲ್ಲಿ ಮೃತರಾದವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ ಘೋಷಣೆ ಮಾಡಿದ್ದಾರೆ.