ಬೆಂಗಳೂರು: ಬೆಳಗಾವಿಯಲ್ಲಿ ನಡೆದಿದ್ದ ಸಮಾವೇಶವೊಂದರಲ್ಲಿ ಕೋವಿಡ್ ನಿಯಮ ಉಲ್ಲಂಘಹಿಸಲಾಗಿದೆ ಎಂದು ನಾಗರಿಕರೊಬ್ಬರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಬೆಳಗಾವಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ.
ಬೆಳಗಾವಿಯಲ್ಲಿ ಜನವರಿ 17ರಂದು ಬೆಳಗಾವಿಯಲ್ಲಿ ಜನಸೇವಕ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ ವಿಚಾರ ಸಂಬಂಧ ರಾಘವೇಂದ್ರ ಎಂಬುವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ನಡೆಸಿತು. ಸಮಾವೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸ್ ಆಯುಕ್ತರು ಪ್ರಮಾಣಪತ್ರಗಳನ್ನೊಳಗೊಡಂತೆ ವರದಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆಯುಕ್ತರ ಪ್ರಮಾಣಪತ್ರಗಳು ಹಾಸ್ಯಸ್ಪದವಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಗರಂ ಆದರು. ಸಾವಿರಾರು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಯಾಕೆ ಕೈಗೊಂಡಿಲ್ಲ ಎಂದು ಪ್ರಶ್ನೆ ಮಾಡಿದರು. ತಕ್ಷಣ ಕ್ರಮಕ್ಕೆ ಬೆಳಗಾವಿ ಎಪಿಎಂಸಿ ಯಾರ್ಡ್ ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿದ್ದಾರೆ. ಇನ್ನು ಈ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಿಜೆ ಎ.ಎಸ್ ಒಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರ ಸ್ಪಷ್ಟನೆ ನೀಡಿದ್ದು, ಒಂದು ವೇಳೆ ಎಫ್ಐಆರ್ ಆಗಿದ್ದರೆ ತನಿಖಾ ವರದಿ ಸಲ್ಲಿಸಲು ಸೂಚನೆ ನೀಡಿದೆ.