ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲಿನಹುಡಿ ವಿತರಿಸಲು ನಿರ್ಧಾರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈಗಾಗಲೇ ಲಾಕ್ಡೌನ್ ಸಮಯದಲ್ಲಿ ಮನೆಲ್ಲಿರುವ ವಿದ್ಯಾರ್ಥಿಗಳಿಗೆ ಅಕ್ಕಿ, ಅಡುಗೆ ಎಣ್ಣೆ ಇನ್ನಿತರ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ಇನ್ನು ಮುಂದೆ ಮಾನ್ಯ ಮುಖ್ಯಮಂತ್ರಿಗಳ ಆಶಯದಂತೆ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೆನೆಭರಿತ ಹಾಲಿನ ಪುಡಿ ವಿತರಿಸಲಾಗುವುದು. ಪ್ರತಿ ತಿಂಗಳಿಗೆ ಪ್ರತಿ ವಿದ್ಯಾರ್ಥಿಗೆ ಅರ್ಧ ಕೆಜಿ ಹಾಲಿನ ಪುಡಿ ವಿತರಿಸಲು ಚಿಂತಿಸಲಾಗಿದೆ. ಇದನ್ನು ಇದೇ ತಿಂಗಳಿನಿಂದಲೇ ಪ್ರಾರಂಭಿಸಲಾಗುವುದು ಎಂದಿದ್ದಾರೆ.
ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಸರ್ಕಾರಿ ಶಾಲಾ ಮಕ್ಕಳಿಗೆ ಪೌಷ್ಟಿಕಾಂಶದ ಆಹಾರ ದೊರಕಬೇಕು ಎನ್ನುವ ಸದುದ್ದೇಶ ಸರ್ಕಾರದ್ದು. ಆ ಮೂಲಕ ನಮ್ಮ ವಿದ್ಯಾರ್ಥಿಗಳ ಆರೋಗ್ಯಕ್ಕೆ ಪರಿಪೂರ್ಣ ಬೆಂಬಲವನ್ನು ದೊರಕಿಸುವ, ಅವರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶ ಹೊಂದಿದ್ದೇವೆ ಎಂದಿದ್ದಾರೆ. ಈ ನಿರ್ಧಾರವು ನಮ್ಮ ಮಕ್ಕಳ ಪೌಷ್ಟಿಕತೆಗೆ ಪೂರಕವಾಗುವುದಷ್ಟೇ ಅಲ್ಲ, ಸಂಕಷ್ಟದಲ್ಲಿರುವ ಗ್ರಾಮೀಣ ಹಾಲು ಉತ್ಪಾದಕರ, ರೈತರ ಆರ್ಥಿಕ ಮಟ್ಟ ಸುಧಾರಿಸಲು ನೆರವಾಗಲಿದೆ ಎಂದು ಸಹ ಸಚಿವರು ಹೇಳಿದ್ದಾರೆ.