ಮಂಗಳೂರು: ಜಿಲ್ಲೆಯ ಪದವಿ ಕಾಲೇಜಿನ ಎಲ್ಲಾ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ, ಬೋಧಕ ವೃಂದದವರಿಗೆ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ನಾಳೆಯಿಂದ ವ್ಯಾಕ್ಸಿನೇಷನ್ ಕಾರ್ಯಕ್ರಮ ಆರಂಭಿಸಲಾಗುತ್ತಿದೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಮಾಹಿತಿ ನೀಡಿದ್ದಾರೆ. ಜುಲೈ ತಿಂಗಳಿನಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳು, ಸ್ನಾತಕೋತ್ತರ ಪದವಿ ಕಾಲೇಜುಗಳು, ಐಐಟಿ, ಡಿಪ್ಲೋಮಾ ಕಾಲೇಜುಗಳು, ಇಂಜಿನಿಯರಿಂಗ್, ಮೆಡಿಕಲ್ ಕಾಲೇಜುಗಳು ಮತ್ತು ಪ್ಯಾರಾ ಮೆಡಿಕಲ್ ಕಾಲೇಜುಗಳಲ್ಲಿ ಸಿಬ್ಬಂದಿಗಳಿಗೆ ಮತ್ತು ಎಲ್ಲಾ ವಿದ್ಯಾರ್ಥಿಗಳಿಗೆ ವ್ಯಾಕ್ಸಿನೇಷನ್ ಕಾರ್ಯಕ್ರಮ ನಾಳೆಯಿಂದ ಆರಂಭಿಸಲಾಗುವುದು ಎಂದಿದ್ದಾರೆ.
ಜೂನ್ 28 ರಿಂದ ಜಿಲ್ಲೆಯ ಎಲ್ಲ ನಗರ, ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳು, ಎಲ್ಲ ತಾಲ್ಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಯಲ್ಲಿಯೂ ಶಿಬಿರ ಮುಂದುವರಿಯಲಿದೆ.
ಲಸಿಕೆ ಶಿಬಿರ ನಡೆಸುವ ಶಿಕ್ಷಣ ಸಂಸ್ಥೆಗಳ ನೋಡಲ್ ಅಧಿಕಾರಿಗಳು, ಶಿಬಿರದ ಸ್ಥಳ ಹಾಗೂ ದಿನಾಂಕವನ್ನು ನಿಗದಿ ಪಡಿಸಿ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಮಾಹಿತಿಯನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ನೀಡಬೇಕು.