ಶಿವಮೊಗ್ಗ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಜೋಗ ಜಲಪಾತ ವೀಕ್ಷಣೆ ಪ್ರವಾಸಿಗರಿಗೆ ಅವಕಾಶ ನೀಡದೆ ಎಲ್ಲಾ ಪ್ರವಾಸಿ ತಾಣಗಳು ಬಂದ್ ಆಗಿದ್ದವು. ಇದೀಗ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಇಂದಿನಿಂದ ಮುಕ್ತ ಅವಕಾಶ ನೀಡಲಾಗಿದೆ.
ಕೊರೊನಾ ಸೋಂಕು ಸ್ವಲ್ಪಮಟ್ಟಿಗೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಅನ್‌ಲಾಕ್ ಘೋಷಿಸಿದ್ದು, ಪ್ರವಾಸಿ ತಾಣಗಳನ್ನು ತೆರೆಯಲು ಅವಕಾಶ ಕಲ್ಪಿಸಿದೆ. ಹೀಗಾಗಿಯೇ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಇಂದಿನಿಂದ ಅವಕಾಶ ಕಲ್ಪಿಸಿದ್ದು, ಮುಂಜಾನೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಮಯಾವಕಾಶ ನಿಗದಿಪಡಿಸಲಾಗಿದೆ.
ಈಗಾಗಲೇ ಪಶ್ಚಿಮ ಘಟ್ಟದಲ್ಲಿ ಮುಂಗಾರಿನ ಅಬ್ಬರ ಆರಂಭವಾಗಿದೆ. ಮಳೆ ಹೆಚ್ಚಿರುವ ಕಾರಣ ಶರಾವತಿ ಜೋಗದಲ್ಲಿ ಮೈದುಂಬಿಕೊಂಡು ರಾಜಾ, ರಾಣಿ, ರೋರರ್, ರಾಕೆಟ್ ಆಗಿ ಧುಮಕುವ ದೃಶ್ಯ ರಮಣೀಯವಾಗಿದೆ. ಈ ಹಿನ್ನಲೆಯಲ್ಲಿ ಪ್ರವಾಸಿಗರ ಸಂಖ್ಯೆಯೂ ಸಹ ಹೆಚ್ಚಾಗಲಿದೆ.
ಕೊರೊನಾದಿಂದ ಮನೆಯಲ್ಲಿಯೇ ಲಾಕ್ ಆಗಿದ್ದವರಿಗೆ ಜೋಗದ ವೈಭೋಗ ವೀಕ್ಷಿಸಲು ಒಳ್ಳೆಯ ಅವಕಾಶ ಎನ್ನಬಹುದು. ಜೋಗ ಜಲಪಾತ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗು ಸ್ಯಾನಿಟೈಸರ್ ಬಳಸುವ ಜೊತೆಗೆ ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸುವಂತೆ ಪ್ರವಾಸೋದ್ಯಮ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ನಿಯಮ ಪಾಲಿಸದಿದ್ದರೆ ದಂಡ ವಿಧಿಸುವ ಎಚ್ಚರಿಕೆಯನ್ನು ನೀಡಿದ್ದಾರೆ.