ಬೆಂಗಳೂರು. ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಇಂದು ಸಿಎಂ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದರ ಕುರಿತು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ, ಈ ವರೆಗೆ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಜಾನುವಾರುಗಳು ಸಾವಿಗೀಡಾಗಿವೆ. ಜನರ ಕಷ್ಟ ಅರಿತು ಅವರ ನೆರವಿಗೆ ಧಾವಿಸಬೇಕಿದ್ದ ಬಿಜೆಪಿ
ನಾಯಕರು ಮುಖ್ಯಮಂತ್ರಿ ಬದಲಾವಣೆ, ಮಂತ್ರಿ ಪದವಿ ಉಳಿಸಿಕೊಳ್ಳುವುದರಲ್ಲಿ ಮಗ್ನರಾಗಿದ್ದಾರೆ” ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಪಕ್ಷವೇ ಭ್ರಷ್ಟರ ಪಕ್ಷವಾಗಿರುವುದರಿಂದ ಶಶಿಕಲಾ ಜೊಲ್ಲೆಯವರು ಲಂಚ ಪಡೆದದ್ದನ್ನು ಬಿಜೆಪಿ ನಾಯಕರು ಸಾಧನೆಯಾಗಿ ಪರಿಗಣಿಸಿದಂತಿದೆ. ಇಲ್ಲದಿದ್ದರೆ ದಾಖಲೆ ಸಮೇತ ಸಿಕ್ಕಿಬಿದ್ದಿರುವ ಭ್ರಷ್ಟ ಮಂತ್ರಿಯನ್ನು ಇನ್ನೂ ಸಚಿವ ಸಂಪುಟದಲ್ಲಿ ಇಟ್ಟುಕೊಂಡು ಸುಮ್ಮನೆ ಕೂರುತ್ತಿದ್ದರೆ? ಎಂದು ಅವರು ಪ್ರಶ್ನಿಸಿದ್ದಾರೆ.