ಬೆಂಗಳೂರು: ಇಂದು ಅಥವಾ ನಾಳೆ ಸಂಪುಟ ರಚನೆ ಮಾಡಲಾಗುತ್ತದೆ. ಹೈಕಮಾಂಡ್ ಸಂದೇಶದ ನಿರೀಕ್ಷೆಯಲ್ಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಪ್ರವಾಹ ಸ್ಥಿತಿ, ಪರಿಹಾರ ಕಾರ್ಯಗಳ ಬಗ್ಗೆ ಸಿಎಸ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಎಲ್ಲಾ ಡಿಸಿಗಳಿಂದ ವರದಿ ತರಿಸಿಕೊಳ್ಳುತ್ತಿದ್ದೇನೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡಿ ಅಗತ್ಯ ಹಣಕಾಸು ಬಿಡುಗಡೆ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ತಿಳಿಸಿದರು.
ಇತ್ತ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಪ್ರಧಾನಿ ದೇವೇಗೌಡರನ್ನು ಮುಖ್ಯಮಂತ್ರಿಗಳು ಭೇಟಿ ಮಾಡಿದರು.
ಮುಂದುವರೆದ ಸಚಿವಾಕಾಂಕ್ಷಿಗಳ ಪರೇಡ್
ಇಂದು ಬೆಳಗ್ಗೆಯೇ ಸಚಿವ ಸ್ಥಾನದ ಆಕಾಂಕ್ಷಿಗಳಾದ ಬಿ.ಸಿ.ಪಾಟೀಲ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಅಶ್ವತ್ಥ ನಾರಾಯಣ್ ಮತ್ತು ಕೆ.ಜಿ.ಬೋಪಯ್ಯ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾದರು. ಸಿಎಂ ಭೇಟಿ ಬಳಿಕ ಮಾತನಾಡಿದ ಬಿ.ಸಿ.ಪಾಟೀಲ್, ಸಿಎಂ ಪ್ರಮಾಣವಚನ ಸ್ವೀಕರಿಸಿದ ಬಳಿಕ ದೆಹಲಿಗೆ ಹೋಗಿ ಬಂದಿದ್ದಾರೆ. ನಮ್ಮ ಕ್ಷೇತ್ರದ ನೀರಾವರಿ ಯೋಜನೆ ಉದ್ಘಾಟನೆಗೆ ಆಹ್ವಾನಿಸಲು ಬಂದಿದ್ದೆ. ಸಚಿವ ಸ್ಥಾನದ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ಸಂಪುಟ ರಚನೆ ಆದಷ್ಟು ಬೇಗ ಆಗುತ್ತೆ ಅಂತ ಅವರೇ ಹೇಳಿದ್ದಾರೆ ಎಂದರು.