Ad Widget .

ದ.ಕ ದಲ್ಲಿ ಮುಂದುವರೆದ ಕೊರೊನಾ ಹಾವಳಿ| ಲಾಕ್ ಡೌನ್, ಹಬ್ಬ ಆಚರಣೆ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು?

ಮಂಗಳೂರು: ಕೊರೊನಾ ಸೋಂಕಿನ ಸಂಭಾವ್ಯ 3ನೇ ಅಲೆಯನ್ನು ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತವು ಅಗತ್ಯ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸರ್ವ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ. ತಿಳಿಸಿದರು.

Ad Widget . Ad Widget .

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‌ ಕ್ಲಬ್‌ನಲ್ಲಿ ಬುಧವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸಂಭಾವ್ಯ ಕೊರೊನಾ 3 ನೇ ಅಲೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

Ad Widget . Ad Widget .

ಕೊರೊನಾ 3ನೇ ಅಲೆಯು ಮಕ್ಕಳಿಗೆ ಹೆಚ್ಚು ಬಾಧಿಸಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ದ. ಕ. ಜಿಲ್ಲೆಯ 86 ಮಂದಿ ಮಕ್ಕಳ ತಜ್ಞರೊಂದಿಗೆ ನಿರಂತರ ಸಭೆಗಳನ್ನು ನಡೆಸಿ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದೆ. ಜಿಲ್ಲಾಡಳಿತವು ಹೊಸತಾಗಿ ಖರೀದಿಸಿದ ವೆಂಟಿಲೇಟರ್‌ಗಳ ಪೈಕಿ ಶೇ.90ರಷ್ಟು ವೆಂಟಿಲೇಟರ್‌ಗಳನ್ನು ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರವರೆಗಿನ ಎಲ್ಲಾ ವಯೋಮಿತಿಯವರಿಗೂ ಬಳಕೆ ಮಾಡಬಹುದಾಗಿದೆ. ಹೈಟೆಕ್‌ ಬೆಡ್‌ಗಳ ಐಸಿಯುವಿನಲ್ಲಿ ಶೆ.50 ರಷ್ಟನ್ನು ಮಕ್ಕಳಿಗಾಗಿ ಕಾದಿರಿಸಲಾಗಿದೆ ಎಂದು ವಿವರಿಸಿದರು.

ದಸರಾವರೆಗೆ ಸಾರ್ವಜನಿಕ ಸೇರುವಿಕೆಗೆ ಅವಕಾಶವಿಲ್ಲ:

ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದರು.

ನಾಗರ ಪಂಚಮಿಯ ದಿನದಂದು ದೇವಾಲಯಗಳಲ್ಲಿ ಭಕ್ತರಿಂದ ವಿಶೇಷ ಪೂಜೆ, ಸೇವೆಗಳಿಗೆ ಅವಕಾಶ ಇಲ್ಲ. ಸಾಂಪ್ರದಾಯಿಕವಾಗಿ ದೇವಸ್ಥಾನಗಳ ಅರ್ಚಕರಿಂದ ನಡೆಯುವ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. ನಾಗಬನ ಹಾಗೂ ಕುಟುಂಬದ ಮನೆಗಳಲ್ಲಿ ಆಚರಿಸಲಾಗುವ ಪೂಜೆಗಳನ್ನು ಕೊರೊನಾ ಮಾರ್ಗಸೂಚಿಯೊಂದಿಗೆ ಯಾವುದೇ ರೀತಿಯಲ್ಲಿ ಜನ ಸಂದಣಿಗೆ ಆಸ್ಪದವಾಗದಂತೆ ಜಾಗೃತಿಯೊಂದಿಗೆ ಸ್ಥಳೀಯ ಆಡಳಿಳಿತದ ಪಿಡಿಒ ಮತ್ತಿತರ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ನಡೆಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆಯೂ ಸರಳ

ಸ್ವಾತಂತ್ರ್ಯ ದಿನಾಚರಣೆಯನ್ನು ಕೂಡಾ ನಿಗದಿತ ಸಿಬಂದಿ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಇಲ್ಲದೆ ನಡೆಸಲಾಗುತ್ತದೆ. ಕೃಷ್ಣ ಜನ್ಮಾಷ್ಠಮಿ, ಗಣೇಶ ಹಬ್ಬದ ಸಂದರ್ಭದಲ್ಲಿಯೂ ಸಾರ್ವಜನಿಕವಾಗಿ ಚಪ್ಪರ, ಶಾಮಿಯಾನ ಹಾಕಿಕೊಂಡು, ಮೆರವಣಿಗೆಯೊಂದಿಗೆ ಯಾವುದೇ ಕಾರ್ಯಕ್ರಮಕ್ಕೆ ಅವಕಾಶ ನೀಡದಿರಲು ಈಗಾಗಲೇ ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಆ.15ರಿಂದ ಮತ್ತೆ ಲಾಕ್‌ಡೌನ್‌ ಮಾಡುವ ಪರಿಸ್ಥಿತಿ ಬಂದಿಲ್ಲ

ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣ ಕನ್ನಡದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿರುವುದು ನಿಜ. ಆದರೆ ಅತ್ಯಂತ ಸುಸಜ್ಜಿತ ಆಧುನಿಕ ಆಸ್ಪತ್ರೆ ಸಹಿತ ಆರೋಗ್ಯ ಮೂಲ ಸೌಲಭ್ಯಗಳು, ಕೊರೊನಾ ಹೆಚ್ಚಿರುವ ಕಾಸರಗೋಡು ಸೇರಿದಂತೆ ಕೇರಳದ ಜತೆ ದ.ಕ. ಜಿಲ್ಲೆ ಗಡಿ ಹಂಚಿಕೊಂಡಿರುವುದರಿಂದ ಸಹಜವಾಗಿ ಪಾಸಿಟಿವಿಟಿ ದರದಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಆದರೆ ಜಿಲ್ಲೆಯಲ್ಲಿ ದಿನಂಪ್ರತಿ ಕೊರೊನಾ ಟೆಸ್ಟ್‌ಗಳ ಸಂಖ್ಯೆಯೂ ಹೆಚ್ಚುತ್ತಿದೆ. ಮಂಗಳವಾರ ಒಂದೇ ದಿನ 9900 ಮಂದಿಗೆ ಟೆಸ್ಟ್‌ ಮಾಡಲಾಗಿದೆ. ಅದೇನಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಆ. 15ರಿಂದ ಮತ್ತೆ ಲಾಕ್‌ಡೌನ್‌ ಮಾಡುವಂತಹ ಪರಿಸ್ಥಿತಿ ಇಲ್ಲ. ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯ ಸರಕಾರದ ನಿರ್ದೇಶನದ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದರು.

Leave a Comment

Your email address will not be published. Required fields are marked *