ಕುಂದಾಪುರ: ಇನ್ನು ಮುಂದೆ ಕೊಲ್ಲೂರು ಶ್ರೀಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಡ್ಡಾಯವಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪಿ.ಬಿ. ಮಹೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್-19 ಹಿನ್ನೆಲೆ ಪ್ರಸ್ತುತ ವಿದ್ಯಾಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಆದೇಶದಂತೆ ಸೆಪ್ಟಂಬರ್ 4ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ದೇವಾಲಯ ಪ್ರವೇಶದ್ವಾರದಲ್ಲಿ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು,ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ.
ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು ದೇವಸ್ಥಾನ ಪ್ರವೇಶಿಸುವ 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್- 19 ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಅಲ್ಲದೆ ಮೂಕಾಂಬಿಕಾ ಕ್ಷೇತ್ರದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಪ್ರಕಟಣೆ ತಿಳಿಸಿದೆ.