ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ.
ಕೊರೊನಾ ಹೆಚ್ಚಳವಾಗುವ ಸಂಭವದ ಹಿನ್ನೆಲೆಯಲ್ಲಿ ಕಳೆದ ತಿಂಗಳ 14ರಿಂದ ಹೇರಿದ್ದ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಈ ಹಿಂದೆ ಪ್ರತಿ ಶನಿವಾರ, ಭಾನುವಾರ ಹಾಗೂ ಸೋಮವಾರಗಳಂದು ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿತ್ತು. ಹೀಗಾಗಿ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿಯೂ ಇಳಿಮುಖವಾಗಿತ್ತು. ಆದರೀಗ ಸ್ಮಾರಕಗಳ ವೀಕ್ಷಣೆಗೆ ಹೇರಲಾಗಿದ್ದ ನಿರ್ಬಂಧ ತೆರವು ಮಾಡಲಾಗಿದ್ದು, ಪ್ರವಾಸಿಗರಿಗೆ ಹಾಗೂ ಯಾತ್ರಾರ್ಥಿಗಳಿಗೆ ಸ್ಮಾರಕಗಳ, ದೇವಸ್ಥಾನಗಳ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಿಕೊಡಲಾಗಿದೆ.
ಮಹಾಮಾರಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪ್ರವಾಸೋದ್ಯಮ ಬಹುತೇಕ ನೆಲ ಕಚ್ವಿದೆ. ಸದ್ಯ ಹಂಪಿ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಮತ್ತೆ ಚೇತರಿಸಿಕೊಳ್ಳವ ಸಾಧ್ಯತೆ ಇದೆ.