ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಏಕಕಾಲಕ್ಕೆ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಕೇರಳ ಹಾಗೂ ಆಂದ್ರ ಪ್ರದೇಶದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ.
ಮುನ್ಸೂಚನೆ ಪ್ರಕಾರ ಇನ್ನೂ ಎರಡು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆ ಮುಂದುವರೆಯಲಿದೆ.
ಕಳೆದ ಎಂಟತ್ತು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಸಂಜೆ ಹಾಗೂ ರಾತ್ರಿ ವೇಳೆ ಮಳೆ ಆರಂಭವಾಗಿ ಕೆಲವೆಡೆ ಸಾಧಾರಣ ಮತ್ತೆ ಕೆಲವೆಡೆ ಭಾರೀ ಮಳೆಯಾಗಿದೆ. ಇಂದು ಬೆಳಗ್ಗೆ ಕೂಡ ಹಗುರ ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಳಿಸಿತ್ತು. ಎರಡೂ ಕಡೆ ವಾಯುಭಾರ ಕುಸಿತವಾಗಿರುವುದರಿಂದ ನೈಋತ್ಯ ಮುಂಗಾರು ಮರಳುವಿಕೆ ಪ್ರಕ್ರಿಯೆ ವಿಳಂಬವಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.
ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದ ನಡುವೆ ಉಂಟಾಗಿರುವ ವಾಯುಭಾರ ಕುಸಿತದ ನಡುವೆ ಟ್ರಪ್ ನಿರ್ಮಾಣವಾಗಿರುವುದರಿಂದ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಕೆಲವೆಡೆ ಆಗಾಗ್ಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಆನಂತರ ನೈಋತ್ಯ ಮುಂಗಾರು ಮರಳುವಿಕೆ ಪ್ರಕ್ರಿಯೆ ಮುಂದುವರೆಯಲಿದೆ. ಇದುವರೆಗೆ ಹವಾ ಮುನ್ಸೂಚನೆ ಪ್ರಕಾರ ಈಗಾಗಲೇ ಮುಂಗಾರು ಮರಳುವಿಕೆ ಪೂರ್ಣಗೊಂಡು ಈಶಾನ್ಯ ಹಿಂಗಾರು ಮಳೆಯ ಪ್ರಕ್ರಿಯೆ ಆರಂಭವಾಗಬೇಕಿತ್ತು ಎಂದವರು ಹೇಳಿದ್ದಾರೆ.
ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು ರಕ್ಷಣಾ ಕಾರ್ಯದಲ್ಲಿ ಸಹಾಯ ಮಾಡಲು ದಕ್ಷಿಣ ನೌಕಾಪಡೆಯ ಕೊಚ್ಚಿಯ ಕೇಂದ್ರ ಕಚೇರಿ ಸಿದ್ದವಾಗಿದೆ. ಕೊಚ್ಚಿಯ ದಕ್ಷಿಣ ನೌಕಾಪಡೆಯಿಂದ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಹಾಯ ಕೋರಿದೆ. ಡೈವಿಂಗ್ ಮತ್ತು ರಕ್ಷಣಾ ತಂಡ ಸದ್ಯದಲ್ಲಿಯೇ ಸ್ಥಳಕ್ಕೆ ಬರಲಿದೆ. ಹವಾಮಾನ ಅನುಕೂಲವಾದರೆ ಹೆಲಿಕಾಪ್ಟರ್ ಸೇವೆಯನ್ನು ಕೂಡ ಬಳಸಿಕೊಳ್ಳಲಾಗುತ್ತದೆ.
ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಕೇರಳದ ಮೇಲೆ ಕಡಿಮೆ ಒತ್ತಡದ ಪ್ರದೇಶವು ಕಡಿಮೆ ಗುರುತಿಸಲ್ಪಟ್ಟಿದೆ. ಆದಾಗ್ಯೂ, ಉತ್ತರ ಕೇರಳ-ಕರ್ನಾಟಕ ಕರಾವಳಿಯಲ್ಲಿ ಆಗ್ನೇಯಕ್ಕೆ ಪೂರ್ವ-ಮಧ್ಯ ಅರಬ್ಬಿ ಸಮುದ್ರದ ಮೇಲೆ ಸರಾಸರಿ ಸಮುದ್ರ ಮಟ್ಟದಲ್ಲಿ ಕಡಿಮೆ ತೀವ್ರತೆಯಿದೆ.ಮುಂದಿನ 24 ಗಂಟೆಗಳಲ್ಲಿ ಕೇರಳದ ಮೇಲೆ ಮಾತ್ರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ನಂತರ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.