ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಅ.30ರಿಂದ ಹಿಂಗಾರು ಮಳೆ ಚುರುಕಾಗಲಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ದಕ್ಷಿಣ ಒಳನಾಡಿನ ರಾಮನಗರ ಮಂಡ್ಯ, ಮೈಸೂರು ಮತ್ತು ಚಾಮರಾಜನಗರದಲ್ಲಿ ಅ.30, 31ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.
ಬೆಂಗಳೂರು, ಬೆಂ.ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಅ.31ರಂದು ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಕಳೆದ ಅ.26ರಂದು ಮುಂಗಾರು ಮಳೆ ಅವಧಿ ಮುಗಿದಿದೆ. ರಾಜ್ಯದ ವಿವಿಧೆಡೆ ಈಗಾಗಲೆ ಹಿಂಗಾರು ಮಳೆಯಾಗುತ್ತಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.