ಬೆಂಗಳೂರು: ರಾಜ್ಯಾದ್ಯಂತ ಇಂದು ಸಂಜೆಯಿಂದಲೇ ಅನ್ವಯವಾಗುವಂತೆ ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ ದರದಲ್ಲಿ 7 ರೂ. ಕಡಿತವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಿನ್ನೆಯಷ್ಟೇ ಕೇಂದ್ರ ಸರ್ಕಾರ ಪ್ರತಿ ಲೀಟರ್ ಡೀಸೆಲ್ ದರವನ್ನು 10 ರೂ. ಹಾಗೂ ಪೆಟ್ರೋಲ್ ದರವನ್ನು 5 ರೂ. ಇಳಿಸಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಪ್ರತಿ ಲೀಟರ್ ಮೇಲೆ 7 ರೂ. ಕಡಿತ ಮಾಡಿರುವ ಪರಿಣಾಮ ರಾಜ್ಯದಲ್ಲಿ ಇನ್ನು ಮುಂದೆ ಡೀಸೆಲ್ ದರ ಪ್ರತಿ ಲೀಟರ್‍ಗೆ 92.50 ಹಾಗೂ ಪೆಟ್ರೋಲ್ ದರ 94.30 ರೂ. ಆಗಲಿದೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ದೇಶದ ಜನತೆಗೆ ಕೇಂದ್ರ ಸರ್ಕಾರ ದೀಪಾವಳಿ ಹಬ್ಬದ ಕೊಡುಗೆಯಾಗಿ ಪ್ರತಿ ಲೀಟರ್ ಡೀಸೆಲ್‍ಗೆ ರೂ. 10 ಹಾಗೂ ಪೆಟ್ರೋಲ್‍ಗೆ 5 ರೂ. ಇಳಿಕೆ ಮಾಡಿತ್ತು.
ನಾನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಗೃಹ ಸಚಿವ ಅಮಿತ್ ಷಾ ಅವರ ಜೊತೆ ಮಾತುಕತೆ ನಡೆಸಿದ ಸಂದರ್ಭದಲ್ಲಿ, ಎಲ್ಲ ರಾಜ್ಯಗಳಲೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಇಳಿಕೆ ಮಾಡಬೇಕೆಂಬುದು ನಮ್ಮ ಅಪೇಕ್ಷೆಯಾಗಿದೆ ಎಂದರು.
ತಕ್ಷಣವೇ ನಾನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಮಾರಾಟ ದರವನ್ನು 7 ರೂ.ಗೆ ಕಡಿತ ಮಾಡಲು ತೀರ್ಮಾನಿಸಿದೆ. ಇತಿಹಾಸದಲ್ಲೇ ಯಾವುದೇ ಸರ್ಕಾರ ಇಷ್ಟು ದೊಡ್ಡ ಪ್ರಮಾಣದಲ್ಲಿ ದರವನ್ನು ಕಡಿಮೆ ಮಾಡಿರಲಿಲ್ಲ ಎಂದು ಸಮರ್ಥಿಸಿಕೊಂಡರು.
ಸರ್ಕಾರದ ಈ ತೀರ್ಮಾನದಿಂದಾಗಿ ಬೊಕ್ಕಸಕ್ಕೆ ಅಂದಾಜು 2100 ಕೋಟಿ ಹೊರೆಯಾಗಲಿದೆ. ಆದರೂ ಜನತೆಯ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದರು.