ಉಪ್ಪಿನಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರೌಢ ಶಾಲೆಯೊಂದರಲ್ಲಿ ಪ್ರಸಕ್ತ ಹತ್ತನೇ ತರಗತಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತ್ತು.
ಆಕೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಗುರುವಾರ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದರು.
ಈ ಬಗ್ಗೆ ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ತನ್ನ ಮೇಲೆ ಹಿರೆಬಂಡಾಡಿ ಗ್ರಾಮದ ಮತ್ತಿಮಾರು ಮನೆ ನಿವಾಸಿ ಕೇಶವ (34) ಎಂಬಾತ ಅತ್ಯಾಚಾರವೆಸಗಿರುವುದನ್ನು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕೇಶವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.