ಮಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಅವರು ‘ಕಳೆದ 40 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಹಿರಿಯ ನಾಯಕರು ಗುರುತಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ’ ಎಂದರು.
ದ.ಕ. ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಡಿ.10ರಂದು ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸಲು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕೆಮ್ಮಾಜೆಯ ಬಂಟ-ಕೃಷಿ ಕುಟುಂಬದಲ್ಲಿ ಜನಿಸಿದ ಮಂಜುನಾಥ್ ಭಂಡಾರಿ ‘ಪಂಚಾಯತ್ ರಾಜ್’ ವಿಷಯದಲ್ಲಿ ಎಂಪಿಎಲ್ ಮತ್ತು ಪಿಎಚ್‌ಡಿ ಮಾಡಿದ್ದಾರೆ. ರಾಜಕೀಯ ಶಾಸ್ತ್ರದಲ್ಲಿ ಎಂಎ ಸ್ನಾತಕೋತ್ತರ ಪದವಿ ಪಡೆದಿರುವ ಮಂಜುನಾಥ್ ಭಂಡಾರಿ 1978ರಲ್ಲಿ ಇಂದಿರಾ ಗಾಂಧಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದಾಗ ರಾಜಕೀಯ ಪ್ರವೇಶ ಪಡೆದರು. ಬಳಿಕ ಚಿಕ್ಕಮಗಳೂರು ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷರಾಗಿ, ಅಖಿಲ ಭಾರತ ಯುವ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಉಪಾಧ್ಯಕ್ಷರಾಗಿ, ಎಐಸಿಸಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.