ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಸಂಸತ್ ನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಈ ಇಬ್ಬರೂ ನಾಯಕರು ಸಂಸತ್ ನಲ್ಲಿ ಮಾತುಕತೆ ನಡೆಸಿದರು.
ಈ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ” ಇಂದು ಸಂಸತ್ತಿನಲ್ಲಿ ನಮ್ಮ ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರ ಜೊತೆ ಉತ್ತಮ ಸಭೆ ನಡೆಸಿದ್ದೇವೆ” ಎಂದು ಬರೆದುಕೊಂಡಿದ್ದಾರೆ.
ಮೂರು ರೈತ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಾಸ್ ಪಡೆದ ಹಿನ್ನೆಲೆಯಲ್ಲಿ ದೇವೇಗೌಡರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ವಿಧಾನ ಪರಿಷತ್ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾಗಿದೆ.