ಬೆಂಗಳೂರು: ರಾಜ್ಯದ ಹಲವೆಡೆ ಜ.1 ಮತ್ತು 2ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಮೂಲಕ ಹೊಸ ವರ್ಷದ ಮೊದಲ ದಿನವೇ ಇಳೆಗೆ ವರ್ಷಧಾರೆ ಬರಲಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಕೊಡಗು ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಎರಡು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಬೀಳುವುದಿಲ್ಲ. ಶುಕ್ರವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿತ್ತು. ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಯಿತು.
ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ ಮಾತನಾಡಿ, ಮೋಡ ಕವಿದ ವಾತಾವರಣ ಜತೆಗೆ ಮೇಲ್ಮೈ ಸುಳಿಗಾಳಿ ಹಾಗೂ ನೆರೆಯ ತಮಿಳುನಾಡಿನಲ್ಲಿ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಮಳೆಯಾಗಲಿದೆ. ತಮಿಳುನಾಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ತುಸು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದರು.