ಮಲ್ಪೆ: ಹಿಜಾಬ್ ವಿವಾದ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯ ತಂದೆಗೆ ಸೇರಿದ ರೆಸ್ಟೋರೆಂಟ್ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಫೆಬ್ರವರಿ 21 ರ ಸೋಮವಾರ ರಾತ್ರಿ 9.30ರ ಸುಮಾರಿಗೆ ಮಲ್ಪೆಯಲ್ಲಿ ನಡೆದಿದೆ.


ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದಿದ್ದಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಲೇಜು ವಿದ್ಯಾರ್ಥಿನಿಯರಲ್ಲಿ ಒಬ್ಬರಾದ ಶಿಫಾ ಅವರ ತಂದೆ ಹೈದರ್ ಅಲಿ ಅವರಿಗೆ ಸೇರಿದ ‘ಬಿಸ್ಮಿಲ್ಲಾ ಹೋಟೆಲ್’ ಮೇಲೆ ಸುಮಾರು 50 ಜನರ ಗುಂಪೊಂದು ಕಲ್ಲು ತೂರಾಟ ನಡೆಸಿದೆ ಎಂದು ತಿಳಿದುಬಂದಿದೆ.
ಇದರಿಂದ ರೆಸ್ಟೋರೆಂಟ್‌ನ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗುಂಪನ್ನು ಚದುರಿಸಿದ್ದಾರೆ.
ದುಷ್ಕರ್ಮಿಗಳ ಗುಂಪು ಹೈದರ್ ಅವರ ಮಗ ಸೈಫ್ (20) ಮೇಲೆ ಹಲ್ಲೆ ನಡೆಸಿರುವ ಆರೋಪವು ಕೇಳಿಬಂದಿದು ಸದ್ಯ ಶಿಫಾ ಸಹೋದರ ಸೈಫ್ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.