ಸಮಗ್ರ ನ್ಯೂಸ್ ಡೆಸ್ಕ್: ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿ, ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದ ಪರಿಣಾಮ ಮಾರ್ಚ್ 17 ರಿಂದ 3 ದಿನ ದಕ್ಷಿಣ ಒಳನಾಡು ಹಾಗೂ ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಾರ್ಚ್ 17 ಕ್ಕೆ ಮೈಸೂರು, ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದೆ. ಮಾರ್ಚ್ 18 ರಂದು ಮೈಸೂರು, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆಯಾದರೆ ಮಾರ್ಚ್ 19 ರಂದು ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು ತಾಪಮಾನ ಮತ್ತಷ್ಟು ಏರಿಕೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ 35 ಡಿಗ್ರಿಗಿಂತ ಮೇಲ್ಮಟ್ಟದಲ್ಲಿದೆ.