ಸಮಗ್ರ ನ್ಯೂಸ್: ರಾಜ್ಯ ಹವಾಮಾನ ಇಲಾಖೆ ಸೋಮವಾರ ಸಂಜೆ ನೀಡಿದ ತನ್ನ ಮುನ್ಸೂಚನೆಯಲ್ಲಿ, ಅಸಾನಿ ಚಂಡಮಾರುತದ ಹಿನ್ನೆಲೆಯಲ್ಲಿ ಗುರುವಾರದವರೆಗೆ ಕರ್ನಾಟಕದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಸೋಮವಾರದಿಂದ ಗುರುವಾರದವರೆಗೆ ಮಳೆ ಸುರಿಯಲಿದೆ.
ಗುರುವಾರ ಮತ್ತು ಶುಕ್ರವಾರ ಉತ್ತರ ಜಿಲ್ಲೆಗಳಾದ ಗದಗ, ಹಾವೇರಿ, ಧಾರವಾಡ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದರೆ, ಬೆಂಗಳೂರಿನಲ್ಲಿಯೂ ತುಂತುರು ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು, ಮೈಸೂರು ಸೇರಿದಂತೆ ದ.ಒಳನಾಡಿನ ಬಹುತೇಕ ಮತ್ತು ಕರಾವಳಿಯ ಕೆಲವು ಭಾಗಗಳಲ್ಲಿ ಭಾನುವಾರದಿಂದ ಮಳೆಯಾಗುತ್ತಿದೆ.