ಸಮಗ್ರ ನ್ಯೂಸ್: ವಾಯುಭಾರ ಕುಸಿತ ಹಿನ್ನಲೆ ರಾಜ್ಯದ ಹಲವಡೆ ಮುಂದಿನ ನಾಲ್ಕು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. 24 ರಿಂದ 28 ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ.
ಕರಾವಳಿ ಭಾಗದಲ್ಲಿ 24, 25 ರಂದು ಗುಡುಗು ಸಿಡಿಲಿನ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ 24 ರಿಂದ 26 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
ಮಾ.27, 28ರಂದು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ, ಜಿಲ್ಲೆಗಳಲ್ಲಿ ಮಾ. 24 ರಿಂದ 28ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
ಮಾ.24 ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಾಳಿ ಹಾಗೂ ಗುಡುಗು, ಸಿಡಿಲಿನ ಆರ್ಭಟ ಜೋರಾಗಿತ್ತು. ಗಾಳಿಯ ಹೊಡೆತಕ್ಕೆ ಹಲವೆಡೆ ಕೃಷಿ ನಾಶ ಸಂಭವಿಸಿದೆ. ಆಸ್ತಿಪಾಸ್ತಿಗಳು ನಷ್ಟವಾಗಿದೆ.
ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಕರಾವಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಗುಡುಗು ಸಹಿತ ಮಳೆ ಸುರಿಯುವ ಬಗ್ಗೆ ಎಚ್ಚರಿಕೆ ನೀಡಿದೆ.
ಗುರುವಾರದ ಗರಿಷ್ಠ ತಾಪಮಾನ 32.3 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 23.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬುಧವಾರ ಬೆಳಗ್ಗಿನಿಂದ ಗುರುವಾರ ಬೆಳಗ್ಗಿನವರೆಗೆ ಸುಬ್ರಹ್ಮಣ್ಯದಲ್ಲಿ 3 ಸೆಂ.ಮೀ., ಬೆಳ್ತಂಗಡಿ ಮತ್ತು ಸುಳ್ಯದಲ್ಲಿ 2 ಸೆಂ.ಮೀ. ಮಳೆ ಸುರಿದಿದೆ.