ಸಮಗ್ರ ನ್ಯೂಸ್: ಮಾರ್ಚ್ 28ರಿಂದ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಗಳನ್ನು ಆಫ್‌ಲೈನ್‌ನಲ್ಲಿ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಹಿಜಾಬ್ ವಿವಾದ ಪಸರಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಕೈಗೊಳ್ಳಲಾಗಿದೆ ಎಂದು ಹೇಳಿದರು
ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸುವಂತಿಲ್ಲ. ವಿದ್ಯಾರ್ಥಿಗಳು ಹೈಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡು ಡ್ರೆಸ್ ಕೋಡ್ ಪಾಲಿಸಬೇಕು ಎಂದು ಮನವಿ ಮಾಡಿದರು. ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8.73 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಕೊರೋನಾ ನಂತರ ಇದೇ ಮೊದಲ ಬಾರಿಗೆ SSLC ಪರೀಕ್ಷೆ ನಡೆಸಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಕೋವಿಡ್ ನಂತರ ನಡೆಯುತ್ತಿರುವ ಮೊದಲ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದಾಗಿದ್ದು, ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಬೋರ್ಡ್ ಕಠಿಣ ಕ್ರಮ ವಹಿಸಿದೆ. ಇದೇ 28 ರಿಂದ ಪರೀಕ್ಷೆ ಪ್ರಾರಂಭವಾಗಲಿದ್ದು, ಏಪ್ರಿಲ್ 11 ರವರೆಗೆ ನಡೆಯಲಿದೆ. ಈ ಬಾರಿ ವಿದ್ಯಾರ್ಥಿಗಳು ಹಾಲ್ ಟಿಕೆಟ್‌ನ್ನ ಸ್ಕೂಲ್ ಲಾಗಿನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಇಂದಿನಿಂದ ಎಲ್ಲಾ ಶಾಲೆಗಳಲ್ಲಿ ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿ ವಿದ್ಯಾರ್ಥಿಗಳಿಗೆ ಕೊಡಲಾಗಿದೆ.