ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ರಾತ್ರಿ ಭಾರೀ ಮಳೆಯಾಗಿದ್ದು, ಇಬ್ಬರು ರೈತರು ಸಿಡಿಲಿಗೆ ಬಲಿಯಾಗಿದ್ದಾರೆ.
ಬೆಂಗಳೂರು, ಬೆಳಗಾವಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ, ದ.ಕನ್ನಡ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಗುರುವಾರ ರಾತ್ರಿ ಭಾರೀ ಮಳೆಯಾಗಿದ್ದು, ಬೆಳಗಾವಿ ಜಿಲ್ಲೆಯ ತುಮ್ಮರ ಗುದ್ದಿ ಗ್ರಾಮದಲ್ಲಿ ಸಿಡಿಲು ಬಡಿದು ಭೀಮಪ್ಪ ಅಡಿವೆಪ್ಪ ಎಂಬುವರು ಸಾವನ್ನಪ್ಪಿದ್ದಾರೆ.
ವಿಜಯಪುರ ತಾಲೂಕಿನ ಮದಭಾವಿ ಗ್ರಾಮದಲ್ಲಿ ಜಮೆರೆಮಸಾಬ ಸಾಹೇಬಲಾಲ ಜಾತಗಾರ ಎಂಬುವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲೂ ಮಳೆ ಅಬ್ಬರ ಹೆಚ್ಚಾಗಿದ್ದು, ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಗುರುವಾರ ಭಾರೀ ಮಳೆಯಾಗಿದೆ. ಮಂಡ್ಯ, ಹುಬ್ಬಳ್ಳಿ, ಗದಗ ಜಿಲ್ಲೆಯಲ್ಲೂ ಮಳೆಯಾಗಿದೆ.
ಕರ್ನಾಟಕದಲ್ಲಿ ಪೂರ್ವ ಮುಂಗಾರು ತುಸು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ ಸೇರಿದಂತೆ ಕೆಲವು ಕಡೆ ಮುಂದಿನ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಕೆಲವು ಕಡೆ ಏ.18ರವರೆಗೆ ಮಳೆಯಾಗುವ ಸಂಭವವಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ತುಮಕೂರಿನ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಎರಡು ದಿನಗಳು ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ಮಂಡ್ಯ, ಮೈಸೂರು ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ಸೇರಿದಂತೆ ಮಂಗಳೂರು ನಗರದಲ್ಲೂ ಭಾರೀ ಮಳೆಯಾಗಿದೆ. ಭಾರೀ ಗಾಳಿ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ವಿದ್ಯುತ್ ಕಂಬ ರಸ್ತೆಗೆ ಬಿದ್ದಿದೆ. ಬಂಗಾಳ ಕೊಲ್ಲಿಯಿಂದ ಈಶಾನ್ಯ ರಾಜ್ಯಗಳಿಗೆ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಬಲವಾದ ನೈಋತ್ಯ ಮಾರುತಗಳ ಪ್ರಭಾವದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಕಾಲ ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.