ಸಮಗ್ರ ನ್ಯೂಸ್: ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಪರಿಸ್ಥಿತಿ ಕುರಿತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಿಎಂಗಳ ಮಹತ್ವದ ಸಭೆ ನಡೆಸಲಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಈ ಸಭೆಯಲ್ಲಿ ದೇಶದ ಕೊರೋನಾ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,527 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆ 4,30,54,952 ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 15,079 ಕ್ಕೆ ಏರಿಕೆಯಾಗಿದೆ. ಇನ್ನೂ 33 ಜನರ ಸಾವಿನೊಂದಿಗೆ ದೇಶದಲ್ಲಿ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದವರ ಸಂಖ್ಯೆ 5,22,149 ಕ್ಕೆ ಏರಿದೆ.