ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಾರುತಗಳು ಚುರುಕುಗೊಂಡಿದ್ದು, ಮುಂದಿನ ಐದು ದಿನಗಳ ಕಾಲ ಉತ್ತಮ ಮಳೆಯಾಗಲಿದೆ. ಮುಂಗಾರಿನ ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗುವ ಲಕ್ಷಣಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ನಿರೀಕ್ಷೆಯಿದೆ. ಜೂ.22ರವರೆಗೆ ಕರಾವಳಿ ಜಿಲ್ಲೆಗಳಿಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಐದು ದಿನಗಳಲ್ಲಿ ನಾಲ್ಕು ದಿನ ‘ಯೆಲ್ಲೋ ಅಲರ್ಟ್’ ಮತ್ತು ಜೂ.20 ರಂದು ಅಧಿಕ ಮಳೆ ನಿರೀಕ್ಷೆಯ ಕಾರಣಕ್ಕೆ ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಗಾಳಿ ಬೀಸುವಿಕೆ ವೇಗ ಗಂಟೆಗೆ ಸುಮಾರು 40ಕಿ.ಮೀ.ಗಿಂತಲೂ ಹೆಚ್ಚಿರಲಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಹಲವೆಡೆ ಅಧಿಕ ಮಳೆ ನಿರೀಕ್ಷಿಸಲಾಗಿದೆ. ಈ ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ಕೊಡಲಾಗಿದೆ. ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗದಲ್ಲಿ ಜೂ.19ರಂದು ಭಾರಿ ಮಳೆ ಕಾರಣಕ್ಕೆ ಅಂದು ಮಾತ್ರ “ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಇದೇ ಐದು ದಿನದ ಅವಧಿಯಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಹಲವು ಪ್ರದೇಶಗಳಲ್ಲಿ ಸಾಮಾನ್ಯದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.