ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ದಕ್ಷಿಣ ಜಿಲ್ಲೆಯ ಪುತ್ತೂರು ಮತ್ತು ಕಡಬದಲ್ಲಿ ಬಿಗುವಿನ ವಾತಾವರಣವಿದೆ. ಪುತ್ತೂರಿನಲ್ಲಿ ಕೆಲವರು ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ಕೈ ಮೀರದಂತೆ ಮೂರೂ ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಮಂಗಳವಾರ ರಾತ್ರಿ ಕೆಲವು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಈ ಘಟನೆಯ ನಂತರ ಸುಳ್ಯ, ಕಡಬ ಹಾಗು ಪುತ್ತೂರು ತಾಲೂಕುಗಳಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಸೆಕ್ಷನ್ 144 ಜಾರಿ ಮಾಡಿ ಪುತ್ತೂರು ವಿಭಾಗಾಧಿಕಾರಿ ಗಿರೀಶ್ ನಂದನ್ ಆದೇಶ ಹೊರಡಿಸಿದ್ದಾರೆ. ಪುತ್ತೂರು, ಸುಳ್ಯ, ಕಡಬ ತಾಲೂಕಿನಾದ್ಯಂತ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದ್ದು, ಪುತ್ತೂರಿನ ಎರಡು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಡಬ, ಬೆಳ್ಳಾರೆ ಪೇಟೆಗಳು ಸಂಪೂರ್ಣ ಬಂದ್ ಆಗಿವೆ. ಕಡಬದಲ್ಲಿ ಎಲ್ಲಾ ಶಾಲೆಗಳಿಗೆ ರಜೆ ನೀಡಲಾಗಿದೆ.
ಪ್ರವೀಣ್ ಹುಟ್ಟೂರಲ್ಲಿ ಬಿಲ್ಲವ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಪ್ರವೀಣ್ ಮೃತದೇಹವನ್ನು ಬೆಳ್ಳಾರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಪುತ್ತೂರು ನಗರದಿಂದ ಪಾರ್ಥಿವ ಶರೀರದ ಮೆರವಣಿಗೆ ಹೊರಟು ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ ಕೊಂಡೊಯ್ಯಲಾಗುತ್ತಿದೆ.
ಹಿಂದೂ ಕಾರ್ಯಕರ್ತರು ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪ್ರತಿಭಟನೆಯನ್ನು ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು, ಎಸ್.ಅಂಗಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ವಿರುದ್ಧವೂ ಆಕ್ರೋಶ ವ್ಯಕ್ತವಾಗುತ್ತಿದೆ.