ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ನಲ್ಲಿ ಏಳನೇ ವೇತನ ಆಯೋಗ ರಚಿಸಲಾ ಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ವಿಧಾನ ಸೌಧದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆಗೆ ಅಗತ್ಯವಾದ 7ನೇ ವೇತನ ಆಯೋಗ ರಚಿಸುವುದಾಗಿ ಮಾಹಿತಿ ನೀಡಿದರು.
ಬೆಳಿಗ್ಗೆಯಿಂದ ಸಂಜೆವರೆಗೆ ಮಾಡುವ ಕೆಲಸ ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ ಎಂದು ಹೇಳಿದರು. ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರು. ಹಾಗಾಗಿ ಅಧಿಕಾರಿಗಳು ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದು ಸಲಹೆ ಮಾಡಿದರು.
ಸರ್ಕಾರಿ ನೌಕರರು, ವಿಶೇಷವಾಗಿ ಪತ್ರಾಂಕಿತ ಎ ಮತ್ತು ಬಿ ಗುಂಪಿನ ನೌಕರರು, ಪುಣ್ಯ ಕೋಟಿ ಯೋಜನೆಯಡಿ 11,000 ರೂ.ಗೆ ದತ್ತು ಪಡೆದು, ಗೋ ಸಂರಕ್ಷಣೆ ಮಾಡುವಂತೆ ಮನವಿ ಮಾಡಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮಾತನಾಡಿ, ಸರ್ಕಾರಿ ಸೇವೆಗೆ ಬರಲು ದೇವರ ಆಶೀರ್ವಾದ ಇರಬೇಕು. ಹಾಗೆಯೆ ಸರ್ಕಾರಿ ನೌಕರರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು. ರಾಜ್ಯ ಸರ್ಕಾರದಿಂದ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆಯ ಸಂದರ್ಭದಲ್ಲಿ ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿ 30 ನೌಕರರಿಗೆ ತಲಾ 50ಸಾವಿರ ರೂ. ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು.