ಸಮಗ್ರ ನ್ಯೂಸ್: ಕನ್ನಡದಲ್ಲಿ ಬರೆದ ಚೆಕ್ಕನ್ನು ಅಮಾನ್ಯ ಮಾಡಿದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಶಾಖೆಗೆ 85,177 ರೂ.ದಂಡ ಪರಿಹಾರ ಪಾವತಿಸುವಂತೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ ನೀಡಿದೆ.
ವಾದಿರಾಜಾಚಾರ್ಯ ಇನಾಮದಾರ ಎಂಬುವರು ತಮ್ಮ ಉಳಿತಾಯ ಖಾತೆ(Account)ಯಲ್ಲಿದ್ದ ಹಣ ಹಿಂಪಡೆಯಲು ಕನ್ನಡದಲ್ಲಿ ಬರೆದ ಚೆಕ್ ಅನ್ನು ಬ್ಯಾಂಕ್ ಗೆ ನೀಡಿದ್ದು, ಈ ವೇಳೆಯಲ್ಲಿ, ಹಳಿಯಾಳದ ಎಸ್‌ಬಿಐ ಶಾಖೆ ತಿರಸ್ಕರಿಸಿತ್ತು. ಬ್ಯಾಂಕ್ ಕಾರ್ಯವೈಖರಿ ವಿರುದ್ದ ನ್ಯಾಯಕ್ಕಾಗಿ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಮನವಿ ಸಲ್ಲಿಸಿದ್ದರು.
ಕನ್ನಡ ಭಾಷೆಯಲ್ಲಿ ಬರೆದುದಕ್ಕಾಗಿ ಅಮಾನ್ಯ ಮಾಡಿರುವುದನ್ನು ಸೇವಾ ನ್ಯೂನತೆ ಎಂದು ಪರಿಗಣಿಸಿ ಎಸ್‌ಬಿಐ ಬ್ಯಾಂಕ್ ಶಾಖೆಯು ದೂರುದಾರರಿಗೆ ಪರಿಹಾರ ಮತ್ತು ದಂಡ ರೂಪದಲ್ಲಿ ಒಟ್ಟು 85,177 ರೂ ಗಳನ್ನು ಪಾವತಿಸುವಂತೆ ಆದೇಶಿಸಿದೆ. ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿ.ಅ. ಬೋಳಶೆಟ್ಟಿ ಮತ್ತು ಪಿ.ಸಿ. ಹಿರೇಮಠ ಈ ತೀರ್ಪು ನೀಡಿದ್ದಾರೆ.