ಸಮಗ್ರ ನ್ಯೂಸ್: ದೇಶದ ಹಲವೆಡೆ ಎನ್.ಐ.ಎ. ಅಧಿಕಾರಿಗಳು ದಾಳಿ ಮಾಡಿದ್ದು, ಮಂಗಳೂರಿನಲ್ಲಿ ಎಸ್.ಡಿ.ಪಿ.ಐ. ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್.ಡಿ.ಪಿ.ಐ.ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿರುವ ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ.
ಮಂಗಳೂರಿನ ನೆಲ್ಲಿಕಾಯಿ ರಸ್ತೆಯನ್ನು ಬಂದ್ ಮಾಡಿ ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಸೋದರನ ಮನೆಯ ಮೇಲೆಯೂ ದಾಳಿ ನಡೆಸಲಾಗಿದೆ.
ಈ ಮಧ್ಯೆ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಚೇರಿಗಳು ಮತ್ತು ಮುಖಂಡ ಮನೆ ಮೇಲೆ ಎನ್ಐಎ ದಾಳಿ ಖಂಡಿಸಿ ಆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ ಪೊಲೀಸರು ನೆಲ್ಲಿಕಾಯಿ ರಸ್ತೆಯನ್ನು ಬಂದ್ ಮಾಡಿದ್ದು, ಕಟ್ಟೆಚ್ಚರ ವಹಿಸಿದ್ದಾರೆ. ಅಲ್ಲದೆ, ಅರೆಮೀಸಲು ಪಡೆಯಿಂದಲೂ ಭಾರಿ ಕಟ್ಟೆಚ್ಚರ ವಹಿಸಲಾಗಿದೆ.
ಎಸ್‌ಡಿಪಿಐ ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಎನ್ಐಎ ದಾಳಿ ಮಾಡಿದ ವಿಷಯ ತಿಳಿಯುತ್ತಿದ್ದಂತೆ ನೂರಾರು ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ಆರಂಭಿಸಿದರು. ಗೋಬ್ಯಾಕ್ ಎನ್‌ಐಎ, ಗೋ ಬ್ಯಾಕ್ ಎನ್‌ಐಎ ಎಂಬ ಘೋಷಣೆಗಳನ್ನು ಕೂಗಿದರು. ಎನ್‌ಐಎ ದಾಳಿಯನ್ನು ಖಂಡಿಸಿದರು. ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಪೊಲೀಸರು ಕೆಲ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡರು.