ಸಮಗ್ರ ನ್ಯೂಸ್: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾನುವಾರ ಸ್ಪಷ್ಟಪಡಿಸಿದ್ದಾರೆ.
“ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಈಗ 80 ವರ್ಷ ವಯಸ್ಸಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಪಕ್ಷವನ್ನು ಬಲಪಡಿಸಲು ನಾನು ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಬಿಜೆಪಿಯ ಹಿರಿಯ ನಾಯಕ ಬೆಳಗಾವಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
“ನನ್ನ ಮಕ್ಕಳಾದ ರಾಘವೇಂದ್ರ ಮತ್ತು ವಿಜಯೇಂದ್ರ ಇಬ್ಬರೂ ಪಕ್ಷವನ್ನು ಬಲಪಡಿಸಲು ರಾಜ್ಯಾದ್ಯಂತ ಸಂಚರಿಸುತ್ತಿದ್ದಾರೆ. ನಾನು ರಾಜಕೀಯದಿಂದ ನಿವೃತ್ತಿ ಹೊಂದಿಲ್ಲ. ದೇವರು ನನಗೆ ಶಕ್ತಿ ನೀಡಿದರೆ, ಮುಂದಿನ ಚುನಾವಣೆಯವರೆಗೆ ಪಕ್ಷಕ್ಕಾಗಿ ದುಡಿಯುತ್ತೇನೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಯಡಿಯೂರಪ್ಪ ಹೇಳಿದ್ದಾರೆ.
ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ನನ್ನನ್ನು ಆಹ್ವಾನಿಸಿದ್ದರು ಮತ್ತು ಪಕ್ಷವು ನನಗೆ ಕರ್ನಾಟಕದಲ್ಲಿ ಸ್ಥಾನಮಾನ, ಅಧಿಕಾರ ಮತ್ತು ಗೌರವವನ್ನು ನೀಡಿದೆ. ಪಕ್ಷಕ್ಕೆ ಮರಳಿ ಕೊಡುವುದು ನನ್ನ ಜವಾಬ್ದಾರಿ ಹಾಗಾಗಿ ಚುನಾವಣೆಗೂ ಮುನ್ನ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ನಾವು ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತೇವೆ. ಎರಡು ಸುತ್ತಿನ ಸಮೀಕ್ಷೆಯ ನಂತರ ಟಿಕೆಟ್ ನೀಡಲಾಗುವುದು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಯಡಿಯೂರಪ್ಪ ಹೇಳಿದರು.