ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ(ಫೆ.1) ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಫೆಬ್ರವರಿ 1 ರಂದು ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಫೆಬ್ರವರಿ 1 ರಂದು ಸಾಧಾರಣ ಮಳೆಯಾಗಲಿದೆ. ಕನಿಷ್ಠ ಉಷ್ಣಾಂಶವು ದಕ್ಷಿಣ ಒಳನಾಡಿನ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ.
ಕರಾವಳಿಯ ಕೆಲ ಭಾಗಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ತುಂತುರು ಅಥವಾ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶ್ರೀಲಂಕಾ ಕಡೆಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಪೂರ್ವಸಮುದ್ರ ತೀರದ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ.