ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಶ್ರೀಲಂಕಾ, ಕೇರಳ, ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯು ಇಂದೂ ಕೂಡ ಮುಂದುವರೆಯಲಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಿರುವರೂರು ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದಲ್ಲದೆ, ನಾಗಪಟ್ಟಣಂ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.
ಶ್ರೀಲಂಕಾ, ತಮಿಳುನಾಡು ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇದೆ. ತಮಿಳುನಾಡು ಮತ್ತು ಕೇರಳ ಭಾಗದಲ್ಲಿ 64.5 ಮಿಮೀ-115.5 ಮಿಮೀ ವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿ ತಮಿಳುನಾಡು ಮತ್ತು ಪುದುಚೇರಿಯಾದ್ಯಂತ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.
ಗಂಟೆಗೆ ಗರಿಷ್ಟ 65 ಕಿ.ಮೀ ವೇಗದಲ್ಲಿ ಚಲಿಸುವ ಸಾಧ್ಯತೆಗಳಿದೆ. ಈ ಹಿನ್ನೆಲೆ ಕನ್ಯಾಕುಮಾರಿ, ತಿರುನೆಲ್ವೇಲಿ , ತೂತ್ತುಕುಡಿ, ರಾಮನಾಥಪುರಂ ಹಾಗೂ ತೆಂಕಾಸಿಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಅಲ್ಲದೇ ನೈಋುತ್ಯ ಬಂಗಾಳ ಕೊಲ್ಲಿ, ಮನ್ನಾರ್ ಕೊಲ್ಲಿ, ಪುದುಚೇರಿ, ಕಾರೈಕಲ್ ಹಾಗೂ ಶ್ರೀಲಂಕಾ ಕರಾವಳಿ ಪ್ರದೇಶಗಳಲ್ಲಿ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಮೈಸೂರು, ಮಂಡ್ಯ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನ ಕನಿಷ್ಠ ತಾಪಮಾನವು 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಳಿದಂತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದೆ.