Ad Widget .

ವಿದ್ಯಾರ್ಥಿಗಳಿಗೆ ವಿತರಣೆಯಾಗದ ಸಮವಸ್ತ್ರ, ಶೂ, ಸಾಕ್ಸ್| ಸರ್ಕಾರಕ್ಕೆ‌ ಮತ್ತೆ ಛೀಮಾರಿ ಹಾಕಿದ ಹೈಕೋರ್ಟ್; ಅಧಿಕಾರಿಗಳಿಗೆ ಜೈಲುಶಿಕ್ಷೆ ಎಚ್ಚರಿಕೆ

ಸಮಗ್ರ ನ್ಯೂಸ್: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಮವಸ್ತ್ರ, ಶೂ ಮತ್ತು ಕಾಲು ಚೀಲ ವಿತರಿಸಿರುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ಮಾಹಿತಿ ನೀಡದ ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ಮತ್ತೆ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ, ಉನ್ನತ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ಸರಿ ಹೋಗುತ್ತದೆ, ಆಗ ಸಮವಸ್ತ್ರ, ಶೂ ಹೇಗೆ ಬರುತ್ತದೆ? ಎಂಬುದು ತಿಳಿದಿದೆ ಎಂದು ನ್ಯಾಯಪೀಠ ಹೇಳಿದೆ.

Ad Widget . Ad Widget .

ಕೊಪ್ಪಳ ಜಿಲ್ಲೆಯ ಮಾಸ್ಟರ್ ಮಂಜುನಾಥ್ ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ನೀಡಬೇಕು ಎಂದು 2019ರ ಆ.28ರ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರ ನೇತೃತ್ವದ ವಿಭಾಗೀಯ ಪೀಠ ಸರ್ಕಾರ ಮತ್ತು ಅಧಿಕಾರಿಗಳ ಕಾರ್ಯವೈಖರಿಯನ್ನು ಖಂಡಿಸಿತು.

Ad Widget . Ad Widget .

ನ್ಯಾಯಮೂರ್ತಿ ಬಿ. ವೀರಪ್ಪ ಅವರು, ಅಧಿಕಾರಿಯನ್ನು ಜೈಲಿಗೆ ಕಳಿಸುತ್ತೇವೆ. ಆಗ ಮಕ್ಕಳಿಗೆ ಸಮವಸ್ತ್ರ ಹೇಗೆ ಬರುವುದಿಲ್ಲ ಎನ್ನುವುದು ನೋಡುತ್ತೇವೆ. ಸರ್ಕಾರದ ಉನ್ನತ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ನಮ್ಮನ್ನು ಕಾಪಾಡಲು ನ್ಯಾಯಾಲಯವಿದೆ ಎಂಬುದು ಜನರಿಗೆ ಗೊತ್ತಾಗುತ್ತದೆ. ಮಾನ ಮಾರ್ಯದೆ ಇಲ್ಲದಿದ್ದರೆ ಅಧಿಕಾರಿಗಳು ಆರು ತಿಂಗಳು ಜೈಲಿಗೆ ಹೋಗಿ ಬರುತ್ತಾರೆ. ಆಗ ಏನೂ ಮಾಡುವುದಕ್ಕೆ ಆಗಲ್ಲ. ಕೋರ್ಟ್‌ಗೂ ಸಹ ಎಲ್ಲೋ ಒಂದು ಕಡೆ ಸರ್ಕಾರದ ಮೇಲೆ ನಂಬಿಕೆ ಹೊರಟು ಹೋಗಿದೆ ಎಂದರು.

ಅಲ್ಲದೆ, ರಾಜ್ಯದ ಎಲ್ಲಾ ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರು (ಡಿಡಿಪಿಐ), ಸಮವಸ್ತ್ರ ಖರೀದಿಸಲು ರಾಜ್ಯ ಸರ್ಕಾರ ಎಷ್ಟು ಹಣ ಬಿಡುಗಡೆ ಮಾಡಿದೆ. ಅದರಲ್ಲಿ ಎಷ್ಟು ಹಣ ಸದ್ಭಳಕೆಯಾಗಿದೆ ಎಂಬ ಬಗ್ಗೆ ವೈಯಕ್ತಿಕವಾಗಿ ಪರಿಶೀಲನೆ ನಡೆಸಬೇಕು.

ಹಾಗೆಯೇ, 2019-20ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಎರಡು ಜೊತೆ ಸವವಸ್ತ್ರ ಮತ್ತು ಶೂ, ಕಾಲು ಚೀಲ ವಿತರಣೆ ಮಾಡುವ ಮೂಲಕ ಸರ್ಕಾರವು ಹೈಕೋರ್ಟ್‌ ತೀರ್ಪು ಪಾಲಿಸಿದೆಯೇ ಅಥವಾ ಇಲ್ಲವೇ ಎಂಬುದನ್ನು ಖಾತರಿಪಡಿಸಿ ಎರಡು ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ನಿರ್ದೇಶಕರು ಸಲ್ಲಿಸಿರುವ ಪ್ರಮಾಣ ಪತ್ರ ಸರ್ಕಾರಿ ವಕೀಲರು ನ್ಯಾಯಪೀಠಕ್ಕೆ ಒದಗಿಸಿದರು. ಸಮವಸ್ತ್ರ ಖರೀದಿಸಲು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. 2019-20, 2020-21, 2021-22, 2022-23ನೇ ಶೈಕ್ಷಣಿಕ ಸಾಲಿನಲ್ಲಿ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೂ ಮತ್ತು ಕಾಲುಚೀಲ ನೀಡಲಾಗಿದೆ ಎಂದು ತಿಳಿಸಿದ್ದರು.

ಆ ಪ್ರಮಾಣ ಪತ್ರ ಪರಿಶೀಲಿಸಿದ ನ್ಯಾಯಪೀಠ, ಸಮವಸ್ತ್ರ, ಶೂ ಮತ್ತು ಕಾಲುಚೀಲ ನೀಡಿರುವುದನ್ನು ಪುಷ್ಠೀಕರಿಸುವ ದಾಖಲೆ ಒದಗಿಸಿಲ್ಲ. ವಿದ್ಯಾರ್ಥಿಗಳಿಗೆ ಸಮವಸ್ತ್ರ ತಲುಪಿರುವುದು ದೇವರಿಗೆ ಮಾತ್ರ ಗೊತ್ತಾಗಬೇಕು. ಸರ್ಕಾರವು ಕೋರ್ಟ್ ಆದೇಶ ಪಾಲಿಸಿಲ್ಲ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಒದಗಿಸಬೇಕೆಂಬ ಮನೋಭಾವ ಸರ್ಕಾರಕ್ಕೆ ಇದ್ದರೆ, ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ನ್ಯಾಯಾಂಗ ನಿಂದನೆ ಆರೋಪದಿಂದ ತಪ್ಪಿಕೊಳ್ಳಬೇಕೆಂದು ಕೋರ್ಟ್‌ಗೆ ಸುಮ್ಮನೆ ಪ್ರಮಾಣಪತ್ರ ಸಲ್ಲಿಸಿದರೆ ಸಾಲದು ಎಂದು ಕಿಡಿಕಾರಿದೆ.

Leave a Comment

Your email address will not be published. Required fields are marked *