ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಗದ್ದಲದ ನಡುವೆಯೇ ಇಂದಿನಿಂದ (ಮಾರ್ಚ್ 31) ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಏಪ್ರಿಲ್ 15ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ.
ಇನ್ನು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಫೋನ್, ಸ್ಮಾರ್ಟ್‌ವಾಚ್, ಇಯರ್‌ಫೋನ್, ಎಲೆಕ್ಟ್ರಾನಿಕ್ಸ್ ಉಪಕರಣ ತರುವಂತಿಲ್ಲ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗಿದೆ. ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಈ ಬಾರಿ ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ರಾಜ್ಯಾದ್ಯಂತ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಇನ್ನು ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ, ತಾಲೂಕ್ ಖಜಾನೆಯಿಂದ ಕೇಂದ್ರಗಳಿಗೆ ತಲುಪಿಸಲು ವಿತರಣಾ ಮಾರ್ಗಗಳನ್ನು ರಚಿಸಲಾಗಿದೆ. ನಿಯಮಾವಳಿ ರೀತಿ ವೇಳಾಪಟ್ಟಿಯಂತೆ ಸಕಾಲಕ್ಕೆ ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ವ್ಯವಸ್ಥೆ ಮಾಡಿ ಕೊಳ್ಳಲಾಗಿದೆ. ಈ ವರ್ಷವೂ ಕೊರೋನಾ ಬ್ಯಾಚ್ ಎಂದು ಪರಿಗಣಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ಇರುತ್ತದೆ ಎಂದು ರಾಜ್ಯ ಪ್ರೌಢ ಶಿಕ್ಷಣಾ ಪರೀಕ್ಷಾ ಮಂಡಳಿ ನಿರ್ದೇಶಕ ಹೆಚ್.ಎ.ಗೋಪಾಲ್ ತಿಳಿಸಿದ್ದಾರೆ.
ಪರೀಕ್ಷೆಗಳು ಬೆಳಗ್ಗೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45ರ ವರಗೆ ನಡೆಯಲಿವೆ. ಬೆಂಗಳೂರಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ಪರಿಗಣಿಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಭಯ, ಗೊಂದಲಗಳಿಗೆ ಒಳಗಾಗದೇ ಪರೀಕ್ಷೆಗೆ ಹಾಜರಾಗಬೇಕು. ಇನ್ನು ಪರೀಕ್ಷೆ ಚೆನ್ನಾಗಿ ಬರೆದಿಲ್ಲ ಎಂದು ಜೀವ ಕಳೆದುಕೊಳ್ಳುವ ಯಾವುದೇ ದುಸ್ಸಾಹಸಕ್ಕೆ ಕೈ ಹಾಕಬೇಡಿ. ಜೀವ ಇದ್ದರೆ ಇಂತಹ ಹತ್ತು ಪರೀಕ್ಷೆಗಳನ್ನು ಎದುರಿಸಿ ಪಾಸಾಗಬಹುದು. ಹಾಗಾಗಿ ವಿದ್ಯರ್ಥಿಗಳು ಯಾವುದೇ ಆತಂಕಕ್ಕೊಳಗಾಗದೇ, ಭಯವಿಲ್ಲದೇ ಪರೀಕ್ಷೆ ಬರೆಯಿರಿ. ಆಲ್ ದಿ ಬೆಸ್ಟ್……