ಸಮಗ್ರ ನ್ಯೂಸ್: ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಪರೀಕ್ಷೆಯ ಮೊದಲ ದಿನವೇ ಕನ್ನಡ ಭಾಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಪ್ರಶ್ನೆ ಪತ್ರಿಕೆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಥಮ ಭಾಷೆ ಕನ್ನಡ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಕಿಡಿಗೇಡಿಗಳು ವಾಟ್ಸ್ ಆಯಪ್ನಲ್ಲಿ ವೈರಲ್ ಮಾಡಿದ್ದಾರೆ. ಆದರೆ ಈವರೆಗೆ ಯಾವುದೇ ಅಧಿಕಾರಿಗಳು ಪ್ರಶ್ನೆ ಪತ್ರಿಕೆ ಸೋರಿಯಾಗಿರುವ ಬಗ್ಗೆ ಖಚಿತಪಡಿಸಿಲ್ಲ. ಪರೀಕ್ಷೆಯು ಬೆಳಿಗ್ಗೆ 10.30 ರಿಂದ ಆರಂಭವಾಗಿದ್ದು, ಮಧ್ಯಾಹ್ನ 1.30 ರವರೆಗೆ ನಡೆಯಲಿದೆ. ಇಂದಿನಿಂದ ಆರಂಭವಾದ ಪರೀಕ್ಷೆಗಳು ಏಪ್ರಿಲ್ 15ರವರೆಗೆ ನಡೆಯಲಿವೆ.
ರಾಜ್ಯಾದ್ಯಂತ ನಡೆಯುವ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬೆಂಗಳೂರಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಇನ್ನು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಫೋನ್, ಸ್ಮಾರ್ಟ್‌ವಾಚ್, ಇಯರ್‌ಫೋನ್, ಎಲೆಕ್ಟ್ರಾನಿಕ್ಸ್ ಉಪಕರಣ ತರುವಂತಿಲ್ಲ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ರಾಜ್ಯಾದ್ಯಂತ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.