ಸಮಗ್ರ ನ್ಯೂಸ್: ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಕ್ಷೇತ್ರದ ಟಿಕೆಟ್ ಅನ್ನು ಕೊನೆಗೂ ಜೆಡಿಎಸ್ ಪಕ್ಷದ ನಿಷ್ಠಾವಂತ ಪ್ರಬಲ ಆಕಾಂಕ್ಷಿಯಾಗಿದ್ದ ಸ್ವರೂಪ್ ಗೆ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಬೆಂಗಳೂರಿನ ಜೆಡಿಎಸ್ ಪಕ್ಷದ ಅಧಿಕೃತ ಕಚೇರಿ ಜೆಪಿ ಭವನದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಹಾಸನ ಕ್ಷೇತ್ರದ ಅಭ್ಯರ್ಥಿಯಾಗಿ ಸ್ವರೂಪ್ ಗೆ ಟಿಕೆಟ್ ನೀಡುತ್ತಿರುವುದಾಗಿ ಘೋಷಣೆ ಮಾಡಿದರು.
ಇದಕ್ಕೂ ಮುನ್ನ ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಹೆಚ್ ಡಿಕೆ ಕೆಲ ಕಾಲ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಿದರು. ಈ ಬಳಿಕ ಅಂತಿಮವಾಗಿ ಹಾಸನ ಕ್ಷೇತ್ರಕ್ಕೆ ಟಿಕೆಟ್ ಅನ್ನು ಸ್ವರೂಪ್ ಗೆ ನೀಡುವುದಾಗಿ ಸುದ್ದಿಗೋಷ್ಠಿಯಲ್ಲೇ ಘೋಷಿಸಿದ್ದಾರೆ.
ಹಾಸನ ಕ್ಷೇತ್ರದಿಂದ ಸ್ವರೂಪ್ ಅವರಿಗೆ ಟಿಕೆಟ್ ಘೋಷಣೆ ಮಾಡಿದ ಬೆನ್ನಲ್ಲೇ ಹಾಸನದಲ್ಲಿ ಸ್ವರೂಪ್ ಅಭಿಮಾನಿಗಳು ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಸಂಭ್ರಮಿಸಿದ್ದಾರೆ. ಸಿಹಿ ತಿನ್ನಿಸಿ ಜೆಡಿಎಸ್ ಪಕ್ಷಕ್ಕೆ ಮತ್ತು ನಾಯಕರಿಗೆ ಜೈಕಾರ ಕೂಗಿದ್ದಾರೆ. ಭವಾನಿ ರೇವಣ್ಣ ಅವರಿಗೆ ಹಾಸನ ಜೆಡಿಎಸ್ ಟಿಕೆಟ್ ಗಾಗಿ ಕೊನೆಯ ಕ್ಷಣದವರೆಗೂ ಹೆಚ್.ಡಿ. ರೇವಣ್ಣ ಅವರು ಮಾಡಿದ ಪ್ರಯತ್ನ ವಿಫಲವಾಗಿದೆ.