ಸಮಗ್ರ ನ್ಯೂಸ್: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಟಿಕೆಟ್ ಹಂಚಿಕೆಯ ವಿರುದ್ಧ ಬಿಜೆಪಿಯೊಳಗೆ ಭಾರೀ ಅಸಮಾಧಾನ ಮೂಡಿದ್ದು, ದಿನಕ್ಕೊಂದು ವಿಕೆಟ್ ಪತನವಾಗುತ್ತಿದೆ. ಟಿಕೆಟ್ ಕೈತಪ್ಪಿದ್ದರಿಂದ ಒಬ್ಬೊಬ್ಬರೇ ಪ್ರಭಾವಿ ನಾಯಕರು ಬಿಜೆಪಿ ತೊರೆಯುತ್ತಿದ್ದಾರೆ. ಇದೀಗ ಶಿವಮೊಗ್ಗದ ಬಿಜೆಪಿ ನಾಯಕ ಆಯನೂರು ಮಂಜುನಾಥ್ ವಿಧಾನಪರಿಷತ್ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಆಯನೂರು ಮಂಜುನಾಥ್ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಇನ್ನೂ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಆದರೂ ಟಿಕೆಟ್ ಸಿಗುವುದು ಖಚಿತ ಇಲ್ಲದ ಕಾರಣ ರಾಜೀನಾಮೆ ಘೋಷಿಸಿದ್ದಾರೆ. ಇದರಿಂದ ಚುನಾವಣೆಗೂ ಮೊದಲೇ ಶಿವಮೊಗ್ಗದಲ್ಲಿ ಬಿಜೆಪಿಗೆ ಮರ್ಮಾಘಾತವಾಗಿದೆ.
ಶಿಮಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಆಯನೂರು ಮಂಜುನಾಥ್, ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇನೆ. ಹುಬ್ಬಳ್ಳಿಗೆ ತೆರಳಿ ಸಭಾಪತಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡುವೆ. ಅಲ್ಲದೇ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು.