ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕರೆ ಮಾಡಿ ಅಭಿನಂದಿಸಿರುವುದನ್ನು ಕಾಂಗ್ರೆಸ್ ಖಂಡಿಸಿದ್ದು, ಹಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ಪ್ರಧಾನಿಯವರು ಈ ನಡವಳಿಕೆ ರಾಜ್ಯದಲ್ಲಿ ನಡೆಯುತ್ತಿರುವ ಶೇ.40ರಷ್ಟು ಕಮಿಷನ್ ಹಗರಣಕ್ಕೆ ಅಧಿಕೃತ ಮುದ್ರೆ ಒತ್ತಿದಂತಾಗಿದೆ ಎಂದು ಆರೋಪಿಸಿದೆ.
ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ನಾಯಕ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಚುನಾವಣೆಯಲ್ಲಿ ಟಿಕೆಟ್ ವಂಚಿತ ಈಶ್ವರಪ್ಪ ಅವರಿಗೆ ಮೋದಿ ಕರೆ ಮಾಡಿ ಅಭಿನಂದಿಸಿದ್ದಾರೆ.
ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಬಿಜೆಪಿ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಆದರೆ ಈಶ್ವರಪ್ಪ ಅವರು ಸಚಿವರಾಗಿದ್ದಾಗ ನೀಡಿದ್ದ ಕಿರುಕೂಳದಿಂದ ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಕುಟುಂಬ ಸದಸ್ಯರಿಗೆ ಪ್ರಧಾನಿ ಎಂದಿಗೂ ಕರೆ ಮಾಡಲಿಲ್ಲ, ಅವರ ತಂದೆ,ತಾಯಿ, ಪತ್ನಿ ಹಾಗೂ ಕುಟುಂಬದ ಸದಸ್ಯರಿಗೆ ಕರೆ ಮಾಡಿ ಸಂತಾಪ ಸೂಚಿಸಲಿಲ್ಲ. ಬೆಳಗಾವಿಗೆ ಬಂದಿದ್ದಾಗ ಅವರ ಮನೆಗೂ ಭೇಟಿ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.