ಸಮಗ್ರ ನ್ಯೂಸ್: ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಹೆಚ್ಚಿನ ವಿವರಗಳನ್ನು ಮುಂದಿನ ಸಭೆಗಳಲ್ಲಿ ಚರ್ಚಿಸಲಾಗುವುದು. ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಅವರು ತಿಳಿಸಿದರು.
200 ಯುನಿಟ್ ಗಳವರೆಗೆ ಉಚಿತ ವಿದ್ಯುತ್, ಬಿಪಿಎಲ್ ಕುಟುಂಬಗಳ ಸದಸ್ಯರಿಗೆ ಉಚಿತವಾಗಿ ತಿಂಗಳಿಗೆ ತಲಾ ಹತ್ತು ಕೆ.ಜಿ. ಅಕ್ಕಿ, ಮನೆಯ ಯಜಮಾನಿಗೆ ತಿಂಗಳಿಗೆ ₹ 2,000 ನೆರವು, ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ ₹ 3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ತಿಂಗಳಿಗೆ ₹ 1,500 ನಿರುದ್ಯೋಗ ಭತ್ಯೆ ಮತ್ತು ಮಹಿಳೆಯರಿಗೆ ರಾಜ್ಯದಾದ್ಯಂತ ಬಸ್ ಗಳಲ್ಲಿ ಉಚಿತ ಪ್ರಯಾಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಣಾಳಿಕೆಯಲ್ಲಿ ಜನರಿಗೆ ಅನೇಕ ಭರವಸೆಗಳನ್ನು ಕೊಟ್ಟಿದ್ದೆವು. ಆದರೆ, ಇವುಗಳು ಕೇವಲ ಒಂದು ವರ್ಷದಲ್ಲಿ ಈಡೇರಿಸುವ ಭರವಸೆಗಳಲ್ಲ. ಇವುಗಳ ಜತೆಗೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ನೀಡಿದ್ದೆವು. ಮೊದಲ ಸಂಪುಟದಲ್ಲಿ 5 ಗ್ಯಾರಂಟಿ ಜಾರಿ ಬಗ್ಗೆ ಹೇಳಿದ್ದೆವು. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.