ಸಮಗ್ರ ನ್ಯೂಸ್: ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಮುನ್ಸೂಚನೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಬೆನ್ನಲ್ಲೇ ಜಿಲ್ಲಾಡಳಿತಗಳಿಗೆ ಎಚ್ಚರದಿಂದ ಇರಲು ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 40 ಕಿ.ಮೀ ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ.
ಬೆಂಗಳೂರು ಸೇರಿ ರಾಜ್ಯದ ಏಳು ಜಿಲ್ಲೆಗಳಲ್ಲಿ ಮಂಗಳವಾರವೂ ಕೆಲಕಾಲ ಉತ್ತಮ ಮಳೆಯಾಗಿದೆ. ಮಳೆ ಸಂಬಂಧಿ ಅನಾಹುತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಧಾರವಾಡ, ಹಾವೇರಿ, ಬಳ್ಳಾರಿ, ತುಮಕೂರು, ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲಕಾಲ ಸೋಮವಾರ ರಾತ್ರಿಯಿಂದೀಚೆಗೆ ಉತ್ತಮ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನತೆಗೆ ತಂಪಿನ ಅನುಭವ ನೀಡಿತು.
ಕರಾವಳಿಯಲ್ಲಿ ಬುಧವಾರದಿಂದ ಮೂರು ದಿನಗಳ ಕಾಲ ಭಾರೀ ಗಾಳಿ-ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಜೊತೆಗೆ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.
ಈ ಮಧ್ಯೆ, ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ತಾಲೂಕಿನ ಮಹಾರಾಜಪೇಟೆಯಲ್ಲಿ ಕುರಿ ಮೇಯಿಸಲು ಹೋದ ನಾಗರಾಜ ಲಕ್ಕಪ್ಪ ಮುತ್ನಾಳ (22) ಸಿಡಿಲಿಗೆ ಬಲಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ಮನೆ ಚಾವಣಿ ಕುಸಿದು ಗಾದಿಲಿಂಗಪ್ಪ (26) ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಮಹಾನಗರದಲ್ಲಿ ಮೂರು ದಿನಗಳಿಂದ ಕಾಣಿಸಿಕೊಂಡಿದ್ದ ಮಳೆಯಬ್ಬರ ಮಂಗಳವಾರವೂ ಮುಂದುವರಿದಿದೆ.