ಸಮಗ್ರ ನ್ಯೂಸ್: ಬಿಪರ್‌ಜೋಯ್ ಚಂಡಮಾರುತದ ಹಿನ್ನೆಲೆಯಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಮೂಲ್ಕಿ, ಬೆಳ್ತಂಗಡಿ, ಪುತ್ತೂರು ಮುಂತಾದ ಕಡೆಗಳಲ್ಲಿ ಮುಂಜಾನೆಯಿಂದಲೇ ಬಾರೀ ಮಳೆ ಸುರಿಯುತ್ತಿದೆ. ಮಂಗಳೂರು ನಗರದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಣ್ಣನೆಯ ವಾತಾವರಣ ಸೃಷ್ಟಿಯಾಗಿದೆ. ಇನ್ನು ಉಡುಪಿ ಜಿಲ್ಲೆಯ ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಬೈಂದೂರು ತಾಲೂಕಿನ ಕೆಲವು ಕಡೆಗಳಲ್ಲಿ ನಿನ್ನೆ ಸಂಜೆ ಮಳೆಯಾಗಿದೆ. ಆದರೆ ಬೆಳಗ್ಗೆ ಬಿಸಿಲಿನಿಂದ ಕೂಡಿದ ವಾತಾವರಣವಿದೆ. ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿಯೂ ಮಳೆ ಸುರಿದಿದೆ.
ಬಿಪರ್‌ಜೋಯ್ ಚಂಡಮಾರುತದ ಹಿನ್ನೆಲೆಯಲ್ಲಿ ಸಮುದ್ರ ಪ್ರಕ್ಷ್ಯಬ್ದವಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮಾತ್ರವಲ್ಲೇ ಕರ್ನಾಟಕ ಹಲವು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಕೇರಳ ಕರಾವಳಿಯಿಂದ ಆಗಮಿಸುವ ಮುಂಗಾರು ಮಳೆಯ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿಯೇ ಕರ್ನಾಟಕ ಕರಾವಳಿ ಭಾಗಗಳಿಗೆ ಮಾನ್ಸೂನ್ ಮಳೆ ಆಗಮನವಾಗಬೇಕಾಗಿತ್ತು. ಆದರೆ ಈ ಬಾರಿ ಕೇರಳಕ್ಕೆ ಮುಂಗಾರು ಎಂಟ್ರಿ ವಿಳಂಭವಾಗಿರುವುದು ಕರ್ನಾಟಕದ ಮೇಲೆಯೂ ಹೊಡೆತ ಕೊಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಸದ್ಯಕ್ಕೆ ಬಿಡುವು ಪಡೆಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಆರಂಭವಾಗುವ ಸಾಧ್ಯತೆಯಿದೆ. ಬಿಪರ್‌ಜೋಯ್ ಚಂಡಮಾರುತದ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಈಗಾಗಲೇ ಮುನ್ಸೂಚನೆಯನ್ನು ನೀಡಿದೆ.