ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000ಗಳನ್ನು ನೀಡುವ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಿ ಆದೇಶಿಸಿದೆ. ಈ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಣ ಮಂಜೂರಾತಿ ಪ್ರಾಧಿಕಾರಿಯನ್ನಾಗಿಸಿ ಆದೇಶಿಸಿದೆ.
ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ.
ದಿನಾಂಕ 20-05-2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ತಾತ್ವಿಕ ಅನುಮೋದನೆ ನೀಡಲಾಗಿತ್ತು. ಈ ಯೋಜನೆಯಂತೆ ಕರ್ನಾಟಕ ರಾಜ್ಯದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000 ನೀಡಲು ಆದೇಶಿಸಲಾಗಿತ್ತು ಎಂದಿದ್ದಾರೆ.
ಈ ಬಳಿಕ ಸರ್ಕಾರವು ಗೃಹ ಲಕ್ಷ್ಮೀ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ 2000 ರೂ ನೀಡಲು ರೂಪುರೇಷೆ ಹಾಗೂ ಮಾರ್ಗಸೂಚಿಗಳನ್ನು ಹೊರಡಿಸಲಾಗಿತ್ತು. ಅಲ್ಲದೇ ಯೋಜನೆ ಅನುಷ್ಠಾನಗೊಳಿಸಲು, ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಕುಟುಂಬದ ಯಜಮಾನಿ ಮಹಿಳೆ ಗೃಹಲಕ್ಷ್ಮೀಗೆ ಅರ್ಜಿ ಸಲ್ಲಿಸಲು ಜೂನ್.15, 2023ರಿಂದ ಜು.15ರವರೆಗೆ ಅವಕಾಶ ನೀಡಲಾಗಿದೆ. ಜುಲೈ 15ರಿಂದ ಫಲಾನುಭವಿಗಳ ಆಯ್ಕೆ ನಡೆಯಲಿದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15ರಂದು ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000ಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಯ ಅರ್ಜಿಗಳನ್ನು ಪರಿಶೀಲಿಸಿ, ಮಂಜೂರಾತಿ ನೀಡಲು ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಮಂಜೂರಾತಿ ಪ್ರಾಧಿಕಾರವೆಂದು ಪರಿಗಣಿಸಿ ಆದೇಶಿಸಿದ್ದಾರೆ.