ಸಮಗ್ರ ವಾರ್ತೆ: ಕೊಎಗು ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದಿದ್ದು, ಹವಾಮಾನ ಇಲಾಖೆಯು ಯೆಲ್ಲೋ ಆಲರ್ಟ್ ಘೋಷಣೆ ಮಾಡಿದೆ. ಕಳೆದ ಹಲವು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಚುರುಕು ಪಡೆದುಕೊಂಡಿದೆ.
ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಗಾಳಿಬೀಡು, ವಿರಾಜಪೇಟೆ ಸೇರಿದಂತೆ ವಿವಿಧ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕೊಡಗಿನ ಹಲವು ಭಾಗಗಳಲ್ಲಿ ಮಳೆ ಜೊತೆಗೆ ಗಾಳಿಯೂ ಹೆಚ್ಚಾಗಿದ್ದು, ಮರಗಳು ಧರೆಗುರುಳಿವೆ. ಬೋಹಿಕೇರಿ ಮತ್ತು ಕುಶಾಲನಗರಕ್ಕೆ ತೆರಳುವ ರಸ್ತೆಯಲ್ಲಿ ಮರ ಬಿದ್ದಿದ್ದು, ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಬಳಿಕ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಅಲ್ಲದೆ, ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ವಿದ್ಯುತ್ ಸಮಸ್ಯೆ ಎದುರಾಗುತ್ತಿದೆ.
ಹೆದ್ದಾರಿ ಕುಸಿಯುವ ಭೀತಿ: ಭಾರಿ ಮಳೆ ಹಿನ್ನೆಲೆಯಲ್ಲಿ ಕೊಡಗು- ಸಂಪಾಜೆ ಗ್ರಾಮದ ಕೊಯನಾಡು ಅರಣ್ಯ ಇಲಾಖೆ ಕಚೇರಿಯ ಬಳಿ ಮತ್ತೆ ಹೆದ್ದಾರಿ ಕುಸಿಯುವ ಭೀತಿ ಎದುರಾಗಿದ್ದು, ಬ್ಯಾರಿಕೇಡ್ ಅಳವಡಿಸಿ ರಸ್ತೆ ಬಂದ್ ಮಾಡಲಾಗಿದೆ. ಮುಖ್ಯ ರಸ್ತೆಯ ಬದಿಯಲ್ಲಿ ಕಳೆದ ಸಲ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆಯ ಮೂಲಕ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಕಳೆದ ಮಳೆಗಾಲದಲ್ಲೂ ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ 275 ಕೊಯನಾಡು ಬಳಿ ರಸ್ತೆ ಬಿರುಕು ಬಿಟ್ಟಿತ್ತು. ಆಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಬದಿಯಲ್ಲೇ ಮತ್ತೊಂದು ರಸ್ತೆಯನ್ನು ಮಾಡಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದರು. ಇದೀಗ ಮತ್ತೊಮ್ಮೆ ಎರಡು ಜಿಲ್ಲೆಯ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ.