ಸಮಗ್ರ ನ್ಯೂಸ್: ಹೊರಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಆಯೋಜಿಸಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದರು.
ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ ಎಂದು ಸಿಎಂ ಹೇಳಿದರು.
ಅಕಾಡೆಮಿ, ಪ್ರಾಧಿಕಾರಗಳಿಗೆ ನೇಮಕ ಮಾಡಲು ಒಂದು ಆಯ್ಕೆ ಸಮಿತಿ ಮಾಡುತ್ತೇವೆ. ಈ ಆಯ್ಕೆ ಸಮಿತಿ ಮತಾಂಧ ಮತ್ತು ಸಮಾಜ ವಿಭಜಿಸುವ ಮನಸ್ಥಿತಿಯವರು ಒಳಗೆ ಪ್ರವೇಶಿಸದಂತೆ ಸ್ಕ್ರೀನಿಂಗ್ ನಡೆಸಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.