ಸಮಗ್ರ ವಾರ್ತೆ: ದ.ಒಳನಾಡು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ (ಜು.25) ಶಾಲೆಗಳಿಗೆ ರಜೆ ನೀಡಲಾಗಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಹಿನ್ನೆಲೆ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಜುಲೈ 25 ರಂದು ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಉಡುಪಿಯಲ್ಲಿ ಹವಾಮಾನ ಇಲಾಖೆ ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿ ಕಟ್ಟಿ ರಜೆ ಘೋಷಣೆ ಮಾಡಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ, ಶಾಲೆಗಳಿಗೆ ಮಂಗಳವಾರ ರಜೆ ನೀಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು, ಹಾಸನ ತಾಲೂಕುಗಳಲ್ಲಿ ಶಾಲೆಗಳಿಗೆ, ಅಂಗನವಾಡಿಗಳಿಗೆ ನಾಳೆಯೂ ರಜೆ ನೀಡಲಾಗಿದೆ. ಹಾಸನ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ಆದೇಶ ಹೊರಡಿಸಿದ್ದಾರೆ.
ಕೊಡಗು, ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ, ಜು.25ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಕುರಿತು ವಿ.ವಿ ಪರೀಕ್ಷಾಂಗ ಪ್ರಕಟಣೆ ಹೊರಡಿಸಿದ್ದು, ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರುನಿಗದಿಪಡಿಸಿ ಎಲ್ಲಾ ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು ಎಂದು ವಿವಿ ಪ್ರಕಟಣೆ ತಿಳಿಸಿದೆ.