ಸಮಗ್ರ ನ್ಯೂಸ್: ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರವು ರಾಜ್ಯದ 195 ತಾಲೂಕುಗಳು ಬರಪೀಡಿತ ಎಂಬುದಾಗಿ ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.

ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ-2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳ ಅನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ಅನುಸಾರ 2023ರನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದೆ ಎಂದು ಹೇಳಿಗೆದ.


ಇನ್ನೂ 195 ತಾಲ್ಲೂಕುಗಳ ಪೈಕಿ 161 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲೂಲ್ಲೂಕು ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲ್ಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದೇ ಮೊದಲು ಅಲ್ಲಿಯವರೆಗೂ ಘೋಷಿಸಿ ಆದೇಶಿಸಿದೆ.

ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರದಿಂದ ಕಾಲ ಕಾಲಕ್ಕೆ ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಹೇಳಿದೆ.

ಹೀಗಿದೆ ಬರಪೀಡಿತ ತಾಲ್ಲೂಕುಗಳ ಪಟ್ಟಿ:
ತೀವ್ರ ಬರಪೀಡಿತ ತಾಲ್ಲೂಕುಗಳಲ್ಲಿ ಬೆಂಗಳೂರು ನಗರದ ಬೆಂಗಳೂರು ಪೂರ್ವ, ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ, ರಾಮನಗರ ಜಿಲ್ಲೆಯ ಕನಕಪುರ, ರಾಮನಗರ, ಹಾರೋಹಳ್ಳಿ, ಕೋಲಾರ ಜಿಲ್ಲೆಯ ಬಂಗಾರಪೇಟೆ, ಕೋಲಾರ, ಮುಳಬಾಗಿಲು, ಶ್ರೀನಿವಾಸಪುರ, ಕೆಜಿಎಫ್, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ, ಮೊಳಕಾಲ್ಮೂರು ತಾಲ್ಲೂಕುಗಳು ಸೇರಿದಂತೆ 161 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ.