ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಗಾಳಿಯು ಗಂಟೆಗೆ 40-45 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 01 ರವರೆಗೆ, ಉತ್ತರ ಒಳ ಕರ್ನಾಟಕ ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ವ್ಯಾಪಕ ಸಾಧಾರಣದಿಂದ ಭಾರೀ ಮಳೆ ಮತ್ತು ಪ್ರತ್ಯೇಕ ಸ್ಥಳಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.