ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಪ್ರತಿಭಟನಾಕಾರರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್‌ಟಿಸಿ) ಬಸ್‌ಗೆ ಬೆಂಕಿ ಹಚ್ಚಿದ್ದಾರೆ.
ಬೀದರ್ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಕೆ.ಎ-38 ಎಫ್-1201 ಬಸ್‌ಗೆ ಬೆಂಕಿ ಹಚ್ಚಿದ್ದರಿಂದ ಸುಟ್ಟು ಕರಕಲಾಗಿದೆ. ಕಿಡಿಗೇಡಿಗಳು, ಬಸ್ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬಸ್‌ಗೆ ಬೆಂಕಿ ಹಚ್ಚಿದ್ದಾರೆ. ಸ್ಥಳೀಯ ಪೊಲೀಸರ ಸಹಕಾರದಿಂದ ಬಸ್‌ನಲ್ಲಿದ್ದ 39 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ನಂತರ ಪ್ರಯಾಣಿಕರಿಗೆ ಸುರಕ್ಷಿತವಾಗಿ ಅವರ ತಲುಪುವ ಸ್ಥಳಕ್ಕೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಘಟನೆ ಹಿನ್ನೆಲೆಯಲ್ಲಿ ಕೆಕೆಆರ್‌ಟಿಸಿ, ಅಂತಾರಾಜ್ಯ ಬಸ್ ಸಂಚಾರ ಸ್ಥಗಿತಗೊಳಿಸಿದೆ. ಮಹಾರಾಷ್ಟ್ರಕ್ಕೆ ತಾತ್ಕಲಿಕವಾಗಿ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಕೆ.ಕೆ.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಮಾಹಿತಿ ನೀಡಿದ್ದಾರೆ. ಕಾರ್ಯಚರಣೆಯಲ್ಲಿರುವ ಬಸ್‌ಗಳನ್ನು ಹತ್ತಿರದ ಪೊಲೀಸ್ ಠಾಣೆ, ಬಸ್ ಡೀಪೋಗಳಲ್ಲಿ ಪಾರ್ಕ್ ಮಾಡಲು ಸಂಸ್ಥೆ ಸಿಬ್ಬಂದಿಗೆ ನಿರ್ದೇಶನ ನೀಡಿದ್ದಾರೆ.